ದಾಖಲೆಯಾಯಿತು ಕೆಪಿಸಿಸಿ ‘ಪ್ರತಿಜ್ಞಾ ದಿನ’
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮ್ಮದ್ ಅವರುಗಳು ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಐತಿಹಾಸಿಕ ದಾಖಲೆ ಬರೆಯಿತು.
ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಬೃಹತ್ ಕಾರ್ಯಕ್ರಮದ ಬದಲಾಗಿ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಕಾರ್ಯಕ್ರಮ ನಡೆಯಿತು.
ರಾಜ್ಯಾದ್ಯಂತ ಸುಮಾರು 10 ಲಕ್ಷಕ್ಕೂ ಹೆಚ್ಚು ಮಂದಿ ಏಕಕಾಲಕ್ಕೆ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿದರು. ವಿನೂತನ ಹಾಗೂ ವಿಶಿಷ್ಟ ಪ್ರಯೋಗಗಳ ಮೂಲಕ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರು ದಾಖಲೆ ಬರೆದರು. ನಗರದ ಕೆಪಿಸಿಸಿ ಕಚೇರಿಯ ಹಿಂಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದಲ್ಲಿ 150 ಮಂದಿ ಗಣ್ಯರು ಭಾಗವಹಿಸಿದ್ದರು.
ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ರಾಜಸ್ಯಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಕೇರಳ, ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ರಾಜ್ಯಾದ್ಯಂತ ಸುಮಾರು 7,800 ಜಾಗಗಳಲ್ಲಿ ಎಲ್‍ಇಡಿಗಳನ್ನು ಅಳವಡಿಸಿ ಕಾರ್ಯಕ್ರಮದ ನೇರ ಪ್ರಸಾರ ಮಾಡಲಾಯಿತು. ಎಲ್ಲೆಡೆ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸುವ ಮೂಲಕ ಕೋವಿಡ್ ರಕ್ಷಣಾ ಕ್ರಮಗಳನ್ನು ಅನುಸರಿಸಲಾಯಿತು.
ಕಾರ್ಯಕ್ರಮದಲ್ಲಿ ಅಧ್ಯಕ್ಷರು ಮತ್ತು ಕಾರ್ಯಾಧ್ಯಕ್ಷರು ಹಂತ ಹಂತವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಆರಂಭದಲ್ಲಿ ವಂದೇ ಮಾತರಂ ಗೀತ ಗಾಯನ ನಡೆಯಿತು. ಸಂವಿಧಾನದ ಪೀಠಿಕೆಯನ್ನು ಪಠಣ ಮಾಡಲಾಯಿತು.
ವರ್ಚುವಲ್ ಕಾನ್ಫರೆನ್ಸ್‍ನಲ್ಲಿ ನೇರ ಪ್ರಸಾರದಲ್ಲಿ ಕಾರ್ಯಕ್ರಮ ವೀಕ್ಷಣೆ ಮಾಡುತ್ತಿದ್ದ ಸುಮಾರು 10 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಮುಖಂಡರು ಕಾರ್ಯಾಧ್ಯಕ್ಷರ ಜತೆಯಲೇ ಪ್ರತಿಜ್ಞಾವಿಧಿ ಸ್ವೀಕರಿಸಿ ನಂತರ ಸಂವಿಧಾನದ ಪೀಠಿಕೆಯನ್ನು ಪಠಣ ಮಾಡಿದರು.
ಪ್ರತಿಜ್ಞಾ ಕಾರ್ಯಕ್ರಮಕ್ಕಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ನಗರಗಳನ್ನು ಸಿಂಗರಿಸಲಾಗಿತ್ತು. ಮಾ.11ರಂದು ಕೆಪಿಸಿಸಿ ಅಧ್ಯಕ್ಷರಾಗಿ ನೇಮಕವಾಗಿದ್ದ ಡಿ.ಕೆ.ಶಿವಕುಮಾರ್ ಅವರು ಆ ಕ್ಷಣದಿಂದಲೇ ಕೆಲಸ ಪ್ರಾರಂಭಿಸಿದ್ದರು. ಅಧಿಕೃತವಾಗಿ ಅಧಿಕಾರ ಸ್ವೀಕರಿಸಲು ಕೋವಿಡ್-19 ಅಡ್ಡ ಬಂದಿತ್ತು.
ಮೂರು ಬಾರಿ ಕಾರ್ಯಕ್ರಮಕ್ಕೆ ನಿಗದಿಪಡಿಸಿ ಸರ್ಕಾರದಿಂದ ಅನುಮತಿ ಸಿಗದೆ ಮುಂದೂಡಿಕೆ ಮಾಡಲಾಗಿತ್ತು. ಕೊನೆಗೆ ಮುಖ್ಯಮಂತ್ರಿಯವರ ಮೌಖಿಕ ಅನುಮತಿ ಆಧರಿಸಿ ಇಂದು ಕಾರ್ಯಕ್ರಮ ನಡೆಸಲಾಯಿತು.