ಬೆಂಗಳೂರು : ಕೊರೊನಾ ಸೋಂಕು ಹರಡುವ ಭೀತಿಯ ನಡುವೆ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದ್ದ ರಾಜ್ಯ ಸರಕಾರ ಇದೀಗ ಜುಲೈ 30 ಮತ್ತು 31ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಸಲಿದೆ.ಬೆಂಗಳೂರಿನಲ್ಲಿ ಮಂಗಳವಾರ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಕೈಗೊಂಡ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಈ ಪರೀಕ್ಷೆಗೂ ಕೈಗೊಳ್ಳಲಾಗುವುದು. ಗಡಿನಾಡು ವಿದ್ಯಾರ್ಥಿಗಳ ಕನ್ನಡ ಪರೀಕ್ಷೆಯನ್ನು ಅಗಸ್ಟ್ 1ರಂದು ನಡೆಸಲಾಗುವುದು.
ರಾಜ್ಯದಲ್ಲಿ ಒಟ್ಟು 1,94,356 ವಿದ್ಯಾರ್ಥಿಗಳು 120 ಸ್ಥಳಗಳ 497 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಬೆಂಗಳೂರು ಮಹಾನಗರದಲ್ಲಿ 83 ಕೇಂದ್ರಗಳ ವ್ಯವಸ್ಥೆ ಮಾಡಲಾಗಿದ್ದು, 40,200 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಒಟ್ಟು ವಿದ್ಯಾರ್ಥಿಗಳಲ್ಲಿ 30 ಮಂದಿ ವಿದೇಶಿಯರೂ ಇದ್ದಾರೆ. ಪರೀಕ್ಷೆಯ ಸಮಯ ಬೆಳಗ್ಗೆ 10.30ರಿಂದ 11.50 ಗಂಟೆ ಹಾಗೂ ಮಧ್ಯಾಹ್ನ 2.30ರಿಂದ 3.30 ಗಂಟೆ ಎಂದು ಡಿಸಿಎಂ ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಕಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದೆ. ಈಗಾಗಲೇ ಎಸ್‌ಒಪಿ ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ದೈಹಿಕ ಅಂತರ ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮುಂಚೆಯೇ ಕೇಂದ್ರಗಳನ್ನ ಸ್ಯಾನಿಟೈಸ್ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.
ಪಾಸಿಟಿವ್ ವಿದ್ಯಾರ್ಥಿಗಳಿಗೂ ಅವಕಾಶ
ಕೊರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗಳಿಗೂ ಸಿಇಟಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಅವರಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗುತ್ತದೆ. ಕೊರೊನಾ ಲಕ್ಷಣಗಳಲ್ಲದೆ ನೆಗಡಿ, ಕೆಮ್ಮು, ಶೀತ ಇರುವ ವಿದ್ಯಾರ್ಥಿಗಳನ್ನೂ ಪ್ರತ್ಯೇಕ ಕೊಠಡಿಗಳಲ್ಲಿ ಕೂರಿಸಲಾಗುವುದು. ಎಲ್ಲ ಕೇಂದ್ರಗಳ ಬಳಿ ಆ್ಯಂಬುಲೆನ್ಸ್ ಸೇರಿ ಸಾರಿಗೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಬೆಂಗಳೂರಿನಲ್ಲಿ ಬಿಎಂಟಿಸಿ ಹಾಗೂ ರಾಜ್ಯಾದ್ಯಂತ ಕೆಎಸ್ಸಾರ್ಟಿಸಿ ವತಿಯಿಂದ ಬಸ್’ಗಳ ವ್ಯವಸ್ಥೆ ಮಾಡಲಾಗಿದೆ.
ಕ್ವಾರಂಟೈನ್ ನಿಂದ ವಿನಾಯಿತಿ
ಸಿಇಟಿ ಪರೀಕ್ಷೆ ಎದುರಿಸುತ್ತಿರುವ ವಿದೇಶಿ ಅಥವಾ ಹೊರಗಿನ ವಿದ್ಯಾರ್ಥಿಗಳಿಗೆ ಹಾಗೂ ಅವರ ಜತೆಯಲ್ಲಿ ಬಂದಿರುವ ಪೋಷಕರಿಗೆ 4 ದಿನಗಳ ಕಾಲ ಕ್ವಾರಂಟೈನ್’ನಿಂದ ವಿನಾಯಿತಿ ನೀಡಲಾಗಿದೆ. ಅವರೂ ಕೂಡ ಎಲ್ಲ ರೀತಿಯಲ್ಲೂ ಪರೀಕ್ಷೆಗೆ ಒಳಗಾಗಿದ್ದಾರೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ಡಿಸಿಎಂ ತಿಳಿಸಿದರು.
ಗಡಿನಾಡ ವಿದ್ಯಾರ್ಥಿಗಳು
ಇನ್ನು ಗಡಿನಾಡ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಬೆಂಗಳೂರಿಗೇ ಬರಬೇಕಾಗಿಲ್ಲ. 188 ಮಂದಿ ಅಂತಹ ವಿದ್ಯಾರ್ಥಿಗಳಿದ್ದು, ಅವರು ಗಡಿ ಭಾಗದಲ್ಲಿರುವ ಬಳ್ಳಾರಿ, ಬೆಳಗಾವಿ, ಬೆಂಗಳೂರು, ಮಂಗಳೂರು, ಬೀದರ್,ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ಕಾರಣಕ್ಕೆ ಈಗಾಗಲೇ ಅನೇಕ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲಿಯೂ ಎಲ್ಲ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.
ಪಿಜಿ–ಸಿಇಟಿ ಪರೀಕ್ಷೆ ಮುಂದಕ್ಕೆ
ಅಂತಿಮ ವರ್ಷದ ಪರೀಕ್ಷೆಗಳು ನಡೆಯದ ಕಾರಣ ಪಿಜಿ-ಸಿಇಟಿ ಹಾಗೂ ಡಿಪ್ಲೋಮೋ-ಸಿಇಟಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಿಗದಿಯಂತೆ ಈ ಪರೀಕ್ಷೆಗಳು ಕ್ರಮವಾಗಿ ಅಗಸ್ಟ್ 8-9 ಮತ್ತು 9 ರಂದು ನಡೆಯಬೇಕಾಗಿತ್ತು. ಅಂತಿಮ ವರ್ಷದ ಪರೀಕ್ಷೆಯ ನಂತರ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದರು.