ಬೆಂಗಳೂರು,ಆ. 7: ಎಸ್‌ಎಸ್‌ಎಲ್‌ಸಿ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ.
ಕೊರೊನಾ ಸಂಕಷ್ಟದ ನಡುವೆಯೂ, ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ರಾಜ್ಯ ಸರ್ಕಾರ ಎಸ್ಎಸ್ಎಲ್‌ಸಿ ಪರೀಕ್ಷೆಗಳನ್ನು ನಡೆಸಿದ್ದು ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದಾರೆ.
ಈ ಸಂಬಂಧ ಮಾಹಿತಿ ನೀಡಿದ ಶಿಕ್ಷಣ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಗಳನ್ನು ಆ.10 ರಂದು ಅಪರಾಹ್ನ 3 ಗಂಟೆಗೆ ಪ್ರಕಟಿಸಲಾಗುವುದೆಂದು ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿಯೂ ಸಚಿವರು ಮಾಹಿತಿ ನೀಡಿದ್ದಾರೆ.
ಕೊರೊನಾ ಸಂಕಷ್ಟದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಮುಂದಾಗಿದ್ದ ಸರ್ಕಾರ, ಅದಕ್ಕಾಗಿ ಅನೇಕ ಪೂರಕ ಕ್ರಮಗಳನ್ನು, ಪರೀಕ್ಷಾ ಕೇಂದ್ರಗಳಲ್ಲಿ ವೈದ್ಯಕೀಯ ಸಿಬ್ಬಂದಿ, ಚಿಕಿತ್ಸೆಗೆ ಪೂರಕ ವ್ಯವಸ್ಥೆ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನೂ ಕೈಗೊಂಡಿತ್ತು. ಅಲ್ಲದೆ ವಿದ್ಯಾರ್ಥಿಗಳು ಮತ್ತು ಪಾಲಕರಲ್ಲಿ ಮನೆ ಮಾಡಿದ್ದ ಆತಂಕವನ್ನು ದೂರ ಮಾಡಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತ್ತು.