ಬೆಂಗಳೂರು, ಆ. 10: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಭೀತಿ ಗಲೆದೋರಿದೆ. ಕರಾವಳಿ ಭಾಗದಲ್ಲಿ ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸೋಮವಾರವೂ ಮಳೆಯ ತಾಡನ ಮುಂದುವರಿದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.ಹವಾಮಾನ ಇಲಾಖೆ ಆ.13ರವರೆಗೂ ಭಾರಿ ಮಳೆಯಾಗುವ ಮುನ್ನೆಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಮತ್ತು ಕಾರವಾರದ ಸಮುದ್ರದಲ್ಲಿ ಸುಮಾರು 4 ಮೀಟರ್ ನಷ್ಟು ಎತ್ತರದ ಅಲೆಗಳು ಕಂಡು ಏಳುವ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 50-60 ಕಿಮೀ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ದುರ್ಬಲವಾಗುವುದರಿಂದ ಆ.10 ಮತ್ತು 11ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗಿನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದುಬರುತ್ತಿದೆ. ಅಣೆಕಟ್ಟೆಯಿಂದಲೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡಲಾಗಿದೆ. ಇದರಿಂದ ನದಿ ಪಾತ್ರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸ್ಥಳಕ್ಕೆ ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.
ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ದೇವಸ್ಥಾನದ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿಧಾಮ, ವೆಲ್ಲಿಸ್ಲಿ ಸೇತುವೆ. ಸಂಗಮ, ಗೋಸಾಯಿ ಘಾಟ್, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖ ಹಾಟ್ ಸ್ಪಾಟ್ ಗಳಲ್ಲಿ ಮುಂಜಾಗ್ರತೆಯಾಗಿ ಬ್ಯಾರಿಕೇಡ್ ಗಳನ್ನು ಹಾಕಲಾಗಿದೆ.