ಬೆಂಗಳೂರು, ಆ.12 : ಪ್ರವಾದಿಗೆ ಸಾಮಾಜಿಕ ಮಾಧ್ಯಮದಲ್ಲಿ ಅಪಚಾರವಾದ ನೆಪದಲ್ಲಿ ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಸುತ್ತಮುತ್ತ ಪ್ರಾರಂಭವಾದ ಹಿಂಸಾಚಾರ ಇದುವರೆಗೆ ಮೂವರನ್ನು ಬಲಿತೆಗೆದುಕೊಂಡಿದೆ.
ದುಷ್ಕರ್ಮಿಗಳ ಗುಂಪೊಂದು ಬೆಂಗಳೂರಿನ ಡಿಜೆ ಹಳ್ಳಿಯನ್ನು ಅಕ್ಷರಶಃ ಬೆಂಕಿಗೆ ಆಹುತಿ ಮಾಡಿದೆ. ಫೇಸ್‌ಬುಕ್‌ನಲ್ಲಿ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ದುಷ್ಕರ್ಮಿಗಳು ದಾಂಧಲೆ ಎಸಗಿದ್ದಾರೆ.
ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಲಾಗಿದೆ ಹಾಗೂ ಹಲವು ವಾಹನಗಳನ್ನು ಜಖಂ ಮಾಡಲಾಗಿದೆ. ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಪೆಟ್ರೋಲ್ ಬಾಂಬ್‌ಗಳನ್ನು ಎಸೆಯಲಾಗಿದೆ. ಕೈಯಲ್ಲಿ ಖಡ್ಗ ಹಿಡಿದು ದುಷ್ಕರ್ಮಿಗಳು ಅಟ್ಟಹಾಸ ಮೆರೆಯುತ್ತಿರುವ ದೃಶ್ಯಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.

ಉದ್ರಿಕ್ತರನ್ನು ತಡೆಯಲು ಪೊಲೀಸರು ಫೈರಿಂಗ್ ಮಾಡಿದ್ದಾರೆ. ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 110 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಅಧಿಕ ಮಂದಿ ಪೊಲೀಸರನ್ನು ನಿಯೋಜಿಸಲಾಗಿದೆ.
500ಕ್ಕೂ ಹೆಚ್ಚು ಜನರು, ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ
ರಸ್ತೆಯಲ್ಲಿ ಹಾಗೂ ಠಾಣೆ ಎದುರೇ ವಾಹನಗಳು ಹೊತ್ತಿ ಉರಿದವು. ಕೈಯಲ್ಲಿ ದೊಣ್ಣೆ ಹಾಗೂ ಕಲ್ಲು ಹಿಡಿದಿದ್ದ ಕೆಲವರು, ಪೊಲೀಸ್ ಹಾಗೂ ಸಾರ್ವಜನಿಕರ ವಾಹನಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದರು. ಪುಲಿಕೇಶಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆಯ ಮೇಲೂ ದಾಳಿ ಮಾಡಿದ್ದ ಕೆಲವರು, ವಿದ್ಯುತ್ ದೀಪ ಹಾಗೂ ಗಾಜುಗಳನ್ನು ಒಡೆದು ಹಾಕಿದರು. ಉದ್ವಿಗ್ನಗೊಂಡಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.
ಗಲಾಟೆ ನಡೆದ ಕೆಲ ನಿಮಿಷಗಳ ನಂತರ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಘಟನಾ ಸ್ಥಳಕ್ಕೆ ಭೇಟಿ ನೀಡಿದರು. ನಗರದ ಎಲ್ಲ ವಲಯಗಳ ಡಿಸಿಪಿ ಹಾಗೂ ಎಸಿಪಿಗಳನ್ನು ಕೆ.ಜಿ.ಹಳ್ಳಿ–ಡಿ.ಜೆ.ಹಳ್ಳಿಗೆ ಠಾಣೆಗೆ ಕರೆಸಿಕೊಂಡು ತುರ್ತು ಸಭೆ ನಡೆಸಿದರು. ಎರಡೂ ಠಾಣೆ ವ್ಯಾಪ್ತಿಯಲ್ಲೂ ಪುಂಡಾಟಿಕೆ ಮಾಡಿದವರನ್ನು ಪತ್ತೆ ಹಚ್ಚಿ ಬಂಧಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ಈ ಸಂಬಂಧ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಜೊತೆ ಚರ್ಚಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಹಿಂಸಾಚಾರ ಹರಡದಂತೆ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ನನ್ನ ಫೇಸ್ ಬುಕ್ ಖಾತೆಯನ್ನು ಯಾರೋ ಹ್ಯಾಕ್ ಮಾಡಿದ್ದಾರೆಂದು ಅಖಂಡ ಶ್ರೀನಿವಾಸ ಮೂರ್ತಿ ಸೋದರಳಿಯ ನವೀನ್ ಹೇಳಿದ್ದು, ಶೀಘ್ರವೇ ಪೊಲೀಸರ ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಘಟನೆಯಲ್ಲಿ 80ಕ್ಕೂ ಹೆಚ್ಚು ಪೊಲೀಸರಿಗೆ ಗಾಯಗಳಾಗಿವೆ. ಈ ಸಂಬಂಧ ಡಿ ಜೆ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಾಸಕ ಜಮೀರ್ ಮತ್ತು ರಿಜ್ವಾನ್ ಆರ್ಷದ್ ಪರಿಸ್ಥಿತಿಯನ್ನು ತಹಬದಿಗೆ ತರಲು ಯತ್ನಿಸಿದರು. ಈ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಈ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೇಳಿದ್ದಾರೆ.
ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಲಾಗಿದೆ. ಪತ್ರಕರ್ತರು, ಪೊಲೀಸರು ಹಾಗೂ ಸಾರ್ವಜನಿಕರ ಮೇಲಿನ ದಾಳಿಯನ್ನು ಸಹಿಸಲು ಅಸಾಧ್ಯವಾದದ್ದು. ಪ್ರಚೋದನಕಾರಿ ಮತ್ತು ವದಂತಿಗಳನ್ನು ಹಬ್ಬಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

































































