
ಬೆಂಗಳೂರು, ಆ. 13 : ಮಂಗಳವಾರ ರಾತ್ರಿ ಗಲಭೆ ಹಿಂಸಾಚಾರ ಸಂಝವಿಸಿದ ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಆಗಸ್ಟ್ 15ರ ಬೆಳಿಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಸೆಕ್ಷನ್ 144 ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಕೆಜಿ ಹಳ್ಳಿ ಹಾಗೂ ಡಿಜೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವಂತಿಲ್ಲ.
ಗಲಭೆಯ ಪ್ರಮುಖ ಆರೋಪಿಗಳಾಗಿದ್ದಾರೆಂದು ಹೇಳಲಾಗುತ್ತಿರುವ 17 ಮಂದಿ ವಿರುದ್ಧ ನಗರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.
ನಿನ್ನೆಯಷ್ಟೇ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ನಿಯಮಾವಳಿ ಪ್ರಕಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ತೀರ್ಮಾನಿಸಿದ್ದರು. ಅಲ್ಲದೆ, ಪ್ರಕರಣ ಸಂಬಂಧ ಈ ವರೆಗೂ 193 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.
ಪ್ರವಾದಿ ಪೈಗಂಬರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕಾರಿ ಪೋಸ್ಟ್ ಮಾಡಿದ್ದನ್ನು ಪ್ರತಿಭಟಿಸಿ ಮಂಗಳವಾರ ರಾತ್ರಿ ವ್ಯಾಪಕ ಹಿಂಸಾಚಾರ ನಡೆದಿತ್ತು. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು.
ಪುಲಕೇಶಿ ನಗರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ನಿವಾಸ, ಸುತ್ತಮುತ್ತಲಿನ ಮನೆಗಳು ಹಾಗೂ ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೋಮಿಗೆ ಸೇರಿದ ಉದ್ರಿಕ್ತ ಗುಂಪು ದಾಂಧಲೆ ನಡೆಸಿ, ವಾಹನಗಳು, ಮನೆ-ಮಳಿಗೆಗಳಿಗೆ ಬೆಂಕಿ ಹಚ್ಚಿತ್ತು. ಶಾಸಕರ ನಿವಾಸ ಹಾಗೂ ಪಕ್ಕದ ಮನೆ ಭಸ್ಮವಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಈ ವೇಳೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಉದ್ರಿಕ್ತರ ಗುಂಪು ಮಾರಕಾಸ್ತ್ರಗಳನ್ನು ಹಿಡಿದು ಹಿಂಸಾಚಾರ ನಡೆಸಿದ್ದರು, ಅಲ್ಲದೆ, ಪಟಾಕಿಗಳನ್ನು ಸಿಡಿಸಿ ವಿಕೃತಿ ಮೆರೆದಿದ್ದರು.