ಬೆಂಗಳೂರು,ಆ.13 : ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ಮಂಗಳವಾರ ರಾತ್ರಿ ನಡೆದ ಹಿಂಸಾಚಾರದಲ್ಲಿ ಪಿಎಫ್ಐ, ಎಸ್’ಡಿಪಿಐ ಪಾತ್ರ ಇರುವುದು ತನಿಖೆಯಿಂದ ಸಾಬೀತಾದರೆ, ಸಂಘಟನೆಗಳನ್ನು ನಿಷೇಧಿಸುವ ಕುರಿತು ಪರಿಶೀಲಿಸಲಾಗುವುದು ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ.
ಡಿಜೆ ಹಳ್ಳಿ ಹಿಂಸಾಚಾರ ಹಿನ್ನೆಲೆಯಲ್ಲಿ ಮಾತನಾಡಿದ ಸಚಿವರು, ಯಾವುದೇ ಸಂಘಟನೆಗಳನ್ನು ನಿಷೇಧ ಮಾಡುವುದಕ್ಕೂ ಮುನ್ನ ಕೆಲ ಪ್ರಕ್ರಿಯೆಗಳಿದ್ದು, ಅವುಗಳನ್ನು ನಾವು ಅನುಸರಿಸಬೇಕಿದೆ. ಮಂಗಳೂರಿನಲ್ಲಿ ನಡೆದಿದ್ದ ಗಲಭೆ ವೇಳೆಯೂ ಎಸ್’ಡಿಪಿಐ ಹಾಗೂ ಪಿಎಫ್ಐ ವಿರುದ್ಧ ಆರೋಪಗಳು ಕೇಳಿ ಬಂದಿತ್ತು. ಇದಲ್ಲದೆ ಕಾಂಗ್ರೆಸ್ ಶಾಸಕ ತನ್ವೀರ್ ಸೇಟ್ ಅವರ ಮೇಲೆ ನಡೆದಿದ್ದ ಮರಣಾಂತಿಕ ಹಲ್ಲೆ ವೇಳೆಯೂ ಈ ಸಂಘಟನೆಗಳ ಮೇಲೆ ಆರೋಪ ಕೇಳಿ ಬಂದಿತ್ತು. ಹೀಗಾಗಿ ಹಲವರು ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸುತ್ತಿದ್ದಾರೆಂದು ಹೇಳಿದ್ದಾರೆ.
ಕಾನೂನಿನ ಅಡಿಯಲ್ಲಿ ಕೆಲ ನಿಬಂಧನೆಗಳಿದ್ದು, ವಿಧ್ವಂಸಕ ಹಾಗೂ ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವವರನ್ನು ನಿಷೇಧಿಸಲು ಅವಕಾಶವಿದೆ. ಈ ಬಗ್ಗೆ ನಾವು ಪರಿಶೀಲನೆ ನಡೆಸುತ್ತೇವೆ. ಪ್ರಸ್ತುತ ಹಿಂಸಾಚಾರದಲ್ಲಿ ಪಾಲ್ಗೊಂಡಿರುವವರಲ್ಲಿ ಎಸ್‌ಡಿಪಿಐ, ಪಿಎಫ್ಐ ಬೆಂಬಲಿಗರು, ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು ಎಂಬ ಮಾಹಿತಿ ಸಿಕ್ಕಿದೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.