ಬೆಂಗಳೂರು, ಅ.13: ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಸರಣ ತೀವ್ರ ಗತಿಯಲ್ಲಿರುವ ಹಿನ್ನೆಲೆಯಲ್ಲಿ ಈಗ ಚುನಾವಣೆ ನಡೆಸಿದರೆ ಅಪಾಯವನ್ನು ಮೈಮೇಲೆ ಎಳೆದುಕೊಂಡಂತಾಗಬಹುದು ಎಂದು ಅರಿವಾಗಿರುವ ಸರಕಾರ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.
ರಾಜ್ಯದಲ್ಲಿ 6, 025 ಗ್ರಾಮ ಪಂಚಾಯಿತಿಗಳಿದ್ದು, ಅವುಗಳ ಅವಧಿ ಜುಲೈ ತಿಂಗಳಲ್ಲಿ ಅಂತ್ಯಗೊಂಡಿದೆ. ಕೊರೊನಾ ಕಾರಣದಿಂದಾಗಿ ಚುನಾವಣೆಯನ್ನು ಮುಂದೂಡಿರುವುದಾಗಿ ಚುನಾವಣಾ ಆಯೋಗ ಮೇ ತಿಂಗಳಲ್ಲಿ ಘೋಷಿಸಿತ್ತು.
ಈ ಮಧ್ಯೆ ಚುನಾವಣೆ ಮುಂದೂಡಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ನ್ಯಾಯಾಲಯದ ನಿರ್ದೇಶನದಿಂದ ಎಲ್ಲಾ ಪಂಚಾಯಿತಿಗಳ ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪೂರ್ಣಗೊಳಿಸಿದೆ. ಮಾರ್ಗಸೂಚಿ ಹೊರಡಿಸುವ ಮೂಲಕ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ.

ನವಂಬರ್ ಅಥವಾ ಡಿಸೆಂಬರ್ ನಲ್ಲಿ ಚುನಾವಣೆ ನಡೆಸಲು ಯೋಜನೆ ಹಾಕಿಕೊಂಡಿದ್ದು, ಸಿದ್ದತಾ ಕಾರ್ಯಗಳು ನಡೆಯುತ್ತಿವೆ.
ಆದರೆ, ಇದೀಗ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜ್ ಅವರಿಗೆ ಪತ್ರ ಬರೆದಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವಂತೆ ಒತ್ತಾಯಿಸಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದನ್ನು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಚುನಾವಣೆ ಕಾಲದಲ್ಲಿ ಮಾರ್ಗಸೂಚಿ ಇದ್ದರೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ ಅಸಾಧ್ಯವಾಗಲಿದೆ ಎಂದು ಹೇಳಲಾಗಿದೆ.






























































