ಉಡುಪಿ, ನ.5 : ಕೊರೊನಾ ವೈರಸ್ ಲಸಿಕೆ ಇನ್ನು ಕೆಲವೇ ತಿಂಗಳಲ್ಲಿ ಲಭ್ಯವಾಗುವ ಸಾಧ್ಯತೆ ಗೋಚರಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಾಕರಗಳು ಲಸಿಕೆ ಸಂಗ್ರಹ ಮತ್ತು ವಿತರಣೆಗೆ ತಯಾರಿ ಪ್ರಾರಂಭಿಸಿವೆ. ಕೆಲ ದಿನಗಳ ಹಿಂದೆಯೇ ಕೇಂದ್ರ ಸರಕಾರ ಲಸಿಕೆ ವಿತರಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯಗಳಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕೊರೊನಾ ಲಸಿಕೆ ಸಂಗ್ರಹ ಕೇಂದ್ರವನ್ನು ಸಜ್ಜುಗೊಳಿಸಲಾಗಿದೆ.
ವಾಕ್ ಇನ್ ಕೂಲರ್ ಅಥವಾ ಲಸಿಕಾ ಕೊಠಡಿ ಎಂದು ಕರೆಯಲಾಗುವ ಇದನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಿದ್ಧಗೊಳಿಸಲಾಗಿದೆ. ಈ ಲಸಿಕಾ ಸಂಗ್ರಹ ಕೊಠಡಿಯಲ್ಲಿ ಸುಮಾರು 2.28 ಕೋಟಿ ಡೋಸ್ ಲಸಿಕೆಯನ್ನು ಸಂಗ್ರಹಿಸಿಡುವ ಸಾಮರ್ಥ್ಯವಿದ್ದು, ಸಂಪೂರ್ಣ ಹವಾನಿಯಂತ್ರಣ ವ್ಯವಸ್ಥೆ ಹೊಂದಿದೆ. ವಿಶ್ವದಾದ್ಯಂತ 248 ಕ್ಕೂ ಅಧಿಕ ಲಸಿಕೆ ತಯಾರಿಕಾ ಕಂಪೆನಿಗಳು ಕೋವಿಡ್ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಮಾಡುತ್ತಿವೆ.
ಲಸಿಕೆ ತಯಾರಿಕಾ ಘಟಕದಿಂದ ಆರಂಭಗೊ0ಡು, ಸಂಚಾರ ವ್ಯವಸ್ಥೆ, ಲಸಿಕಾ ಸಂಗ್ರಹ ಕೊಠಡಿಯಲ್ಲಿ ಶೇಖರಣೆ ಮತ್ತು ಲಸಿಕೆ ವಿತರಣಾ ಸ್ಥಳಕ್ಕೆ ತಲುಪುವವರೆಗೆ ಲಸಿಕೆಗೆ ಅಗತ್ಯವಿರುವ 2 ರಿಂದ 8 ಡಿಗ್ರಿ ವರೆಗಿನ ತಾಪಮಾನ ಕಾಪಾಡುವ ಅಗತ್ಯವಿದ್ದು, ಯಾವುದೇ ಸಂದರ್ಭದಲ್ಲಿ ಲಸಿಕೆಯ ತಾಪಮಾನ ವ್ಯತ್ಯಯವಾಗದಂತೆ ನಿಗಾ ವಹಿಸಲು ಜಿಲ್ಲೆಯಲ್ಲಿ ಈಗಾಗಲೇ ಒಟ್ಟು 77 ಕೋಲ್ಡ್ ಚೈನ್ ಸಿಸ್ಟಂ ಸ್ಥಳಗಳನ್ನು ಗುರುತಿಸಲಾಗಿದೆ. ಈ ಎಲ್ಲಾ ಸ್ಥಳಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆ ಸಾಗಾಟಕ್ಕೆ 1324 ವಾಹನಗಳು, 9370 ಐಸ್ ಪ್ಯಾಕ್‌ಗಳ ವ್ಯವಸ್ಥೆ ಮಾಡಲಾಗಿದ್ದು. ಲಸಿಕೆ ನೀಡಲು ನುರಿತ ಸಿಬ್ಬಂದಿಯನ್ನೂ ಸಹ ಗುರುತಿಸಲಾಗಿದೆ.
ಉಡುಪಿಯಲ್ಲಿ ಸಜ್ಜಾಗಿದೆ ಕೊರೊನಾ ಲಸಿಕೆ ಸಂಗ್ರಹ ಕೇಂದ್ರ


































































