ಬೆಂಗಳೂರು, ನ. 24 : ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ.
ಗುತ್ತಿಗೆದಾರರು ಪ್ರಸ್ತುತ ಗ್ರಾಮ ಪಂಚಾಯತ್ ಕಾಮಗಾರಿ ನಿರ್ವಹಿಸುತ್ತಿದ್ದಲ್ಲಿ ಅವರು ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹರಾಗುತ್ತಾರೆ. ಈ ವಿಷಯದಲ್ಲಿ ಚುನಾವಣಾಧಿಕಾರಿಗಳಿಗೆ ಮಾಹಿತಿ ಇಲ್ಲವಾದಲ್ಲಿ ಅವರು ಯಾವುದೇ ಕ್ರಮ ತೆಗೆದುಕೊಳ್ಳುವ ಅಗತ್ಯವಿಲ್ಲ.ಆದರೆ, ಒಂದು ವೇಳೆ ಅಭ್ಯರ್ಥಿಯೊಬ್ಬರು ಈ ಬಗ್ಗೆ ಮಾಹಿತಿಯನ್ನು ಸೂಕ್ತ ದೃಢೀಕರಣದೊಂದಿಗೆ ನೀಡಿದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ.





























































