ವಿಟ್ಲ: ಗ್ಯಾಸ್ ಸಾಗಾಟದ ಟ್ಯಾಂಕರ್ ಒಂದು ರಸ್ತೆಯಲ್ಲಿ ಪಲ್ಟಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸೂರಿಕುಮೇರು ಮಸೀದಿ ಮುಂಭಾಗ ದಲ್ಲಿ ಫೆ.2ರ ಮುಂಜಾನೆ ನಡೆದಿದ್ದು, ಇದರಿಂದಾಗಿ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರಿನಿಂದ ಬೆಂಗಳೂರು ಕಡೆಗೆ ಅನಿಲ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಕಳೆದು ರಸ್ತೆ ಉರುಳಿದೆ. ಇದರಿಂದ ಅನಿಲ ಸೋರಿಗೆ ಉಂಟಾಗುವ ಸಾಧ್ಯತೆಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲಾ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಅನಿಲ ಸೋರಿಕೆ ನಿಯಂತ್ರಿಸುವ ತಾಂತ್ರಿಕ ತಂಡ ಸ್ಥಳಕ್ಕೆ ಆಗಮಿಸಿ, ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮುಂಜಾನೆ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಇನ್ನೂ ಮಂಗಳೂರು ಕಡೆಯಿಂದ ಬರುವ ವಾಹನವನ್ನು ಕಲ್ಲಡ್ಕ, ವಿಟ್ಲ ರಸ್ತೆ ಮೂಲಕ ಹಾಗೂ ಬೆಂಗಳೂರು, ಉಪ್ಪಿನಂಗಡಿ ಕಡೆಯಿಂದ ಬರುವ ವಾಹನಗಳನ್ನು ಮಾಣಿ, ಬುಡೋಳಿ, ಕಬಕ ಮೂಲಕ ಬದಲಿ ರಸ್ತೆಯ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿರುವ ವಿಟ್ಲ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕದಳವರು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬುಡೋಳಿ ಯೂತ್ ಫೆಡರೇಶನ್ ಸದಸ್ಯರು, ಸೂರಿಕುಮೇರು ಬದ್ರಿಯಾ ಯಂಗ್ ಮೆನ್ಸ್ ಸದಸ್ಯರ ಸಹಿತ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಇಲಾಖಾಧಿಕಾರಿಗಳೊಂದಿಗೆ ವಾಹನ ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ. ಇದುವರೆಗೂ ಅನಿಲ ಸೋರಿಕೆಯಾಗದ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ. ಸ್ಥಳೀಯ ಮಸೀದಿಯ ಧ್ವನಿ ವರ್ಧಕದ ಮೂಲಕ ಸುತ್ತಮುತ್ತಲಿನ ಭಾಗದ ಮನೆಗಳಲ್ಲಿ ಬೆಂಕಿ ಬಳ ದಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






























































