Saturday, January 22, 2022
spot_img
Homeರಾಜ್ಯಕೇರಳದಲ್ಲಿ ಹೆಚ್ಚಿದ ಕೊರೊನಾ ಸೋಂಕು: ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಬೊಮ್ಮಾಯಿ ಸೂಚನೆ

ಕೇರಳದಲ್ಲಿ ಹೆಚ್ಚಿದ ಕೊರೊನಾ ಸೋಂಕು: ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಬೊಮ್ಮಾಯಿ ಸೂಚನೆ

ಬೆಂಗಳೂರು: ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಸೂಚನೆ ನೀಡಿದ್ದಾರೆ. 

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಂತೆಯೇ ಕೋವಿಡ್-19 ಪರಿಸ್ಥಿತಿ ಕುರಿತು ಗಡಿ ಜಿಲ್ಲೆಯ ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಲಾಗುತ್ತದೆ. ಈ ವೇಳೆ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಚನೆಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

ಈಗಾಗಲೇ ರಾಜ್ಯದ ಗಡಿ ಪ್ರದೇಶಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಲಾಗಿದೆ. ಕೊರೋನಾ ಪರೀಕ್ಷೆ ಹಾಗೂ ಲಸಿಕೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ. ನಮ್ಮ ಸದ್ಯದ ಆದ್ಯತೆ ಕೊರೋನಾ ಸೋಂಕಿನ ಹರಡುವಿಕೆ ತಡೆಯುವುದಾಗಿದೆ ಎಂದಿದ್ದಾರೆ. 

ರಾಜ್ಯದಲ್ಲೂ ಏಕಾಏಕಿ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಕೇರಳದ ಬಳಿಕ ನೆರೆಯ ಕರ್ನಾಟಕ ಮತ್ತು ತಮಿಳುನಾಡನಲ್ಲೂ ಕೂಡ ಗುರುವಾರ ಹೊಸ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ದಾಖಲಿಸಿದೆ.

ನಿನ್ನೆಯಷ್ಟೇ ರಾಜ್ಯದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಗಡಿ ಜಿಲ್ಲೆಗಳ ಆಯುಕ್ತರೊಂದಿಗೆ ಮಾತುಕತೆ ನಡೆಸಿದ್ದ ಸಿಎಂ ಬೊಮ್ಮಾಯಿಯವರು, ಕೋವಿಡ್ ಪರಿಸ್ಥಿತಿ ಕುರಿತಂತೆ ಮಾಹಿತಿ ಪಡೆದುಕೊಂಡರು. ಅಲ್ಲದೆ, ಶನಿವಾರ ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸುವುದಾಗಿ ತಿಳಿಸಿದರು. ಜೊತೆಗೆ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆಯೂ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಸೂಚನೆ ಬೆನ್ನಲ್ಲೇ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಜಿಲ್ಲೆಗಳ ಉಪ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ್ದಾರೆಂದು ತಿಳಿದುಬಂದಿದೆ. 

ಆರೋಗ್ಯ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು ಮಾತನಾಡಿ, ಪ್ರತೀನಿತ್ಯ 1.5 ಲಕ್ಷ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸೋಂಕು ಪ್ರಕರಣಗಳು ಹೆಚ್ಚಾಗಿದ್ದೇ ಆದರೆ, ಪರೀಕ್ಷೆಗಳ ಸಂಖ್ಯೆಯನ್ನು ಮತ್ತಷ್ಟು ಏರಿಕೆ ಮಾಡಲಾಗುತ್ತದೆ. ಕೇರಳದಿಂದ ರಾಜ್ಯಕ್ಕೆ ಬರುವ ಜನರಿಗೆ ಆರ್’ಟಿಪಿಸಿಆರ್ ನೆಗೆಟಿವ್ ವರದಿ ತರುವಂತೆ ಸೂಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ನಡುವೆ ಬಿಬಿಎಂಪಿ, ಮುಖ್ಯ ಆಯುಕ್ತರು ಹಾಗೂ ಉಪ ಆಯುಕ್ತರಿಗೆ ಸೂಚನೆ ನೀಡಿರುವ ರಾಜ್ಯ ಸರ್ಕಾರ, ತಮ್ಮ ವ್ಯಾಪ್ತಿಯಲ್ಲಿನ ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಂತೆ ಸೂಚನೆ ನೀಡಿದೆ. 

ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಅವರು ಆದೇಶ ಹೊರಡಿಸಿದ್ದು, ಆದೇಶದಲ್ಲಿ ಕೆಲವು ದಿನಗಳಿಂದ ರಾಜ್ಯದ ಕೆಲವು ಪ್ರದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿದೆ. ನೆರೆಯ ರಾಜ್ಯಗಳ ಗಡಿ ಭಾಗಗಳಲ್ಲೂ ಸೋಂಕು ಹರಡುತ್ತಿದೆ. ಸ್ಥಳೀಯವಾಗಿ ಪರಿಸ್ಥಿತಿ ಅವಲೋಕಿಸಿ, ಬಿಗಿಯಾದ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಿದೆ. ಪರೀಕ್ಷೆ, ಸೋಂಕಿತರನ್ನು ಪ್ರತ್ಯೇಕಿಸುವುದು ಮತ್ತು ಚಿಕಿತ್ಸೆ ನೀಡುವುದಕ್ಕೆ ಒತ್ತು ನೀಡಬೇಕು. ಕೋವಿಡ್‌ ಲಸಿಕೆ ನೀಡುವುದನ್ನೂ ಆದ್ಯತೆಯ ಕೆಲಸವಾಗಿ ಮಾಡಬೇಕು’ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!