ಬೆಂಗಳೂರು: ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಆ ಎರಡು ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ಕೆಲವು ಕಡ್ಡಾಯ ನಿಯಮಗಳನ್ನು ಪಾಲಿಸುವಂತೆ ಸೂಚಿಸಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಲಾಗಿದ್ದು, ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರು ಎರಡು ಡೋಸ್ ಲಸಿಕೆ ಪಡೆದಿದ್ದರೂ, ರಾಜ್ಯಕ್ಕೆ ಬರುವ 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದಿರಬೇಕು ಎಂದು ತಿಳಿಸಲಾಗಿದೆ.
ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಮೈಸೂರು ಹಾಗೂ ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಮೂಲಕ ರಾಜ್ಯಕ್ಕೆ ಬರುವ ವಾಹನ ಚಾಲಕರು, ಸಹಾಯಕರು ಮತ್ತು ಪ್ರಯಾಣಿಕರು ಮೇಲೆ ತಿಳಿಸಿರುವ ನಿಯಮದ ಅನುಪಾಲನೆಗೆ ಚೆಕ್ ಪೋಸ್ಟ್ಗಳನ್ನು ಸ್ಥಾಪನೆ ಮತ್ತು ಸಿಬ್ಬಂದಿ ನಿಯೋಜನೆಗೆ ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.
