ಮೈಸೂರು: ರಾಜ್ಯ ಸರ್ಕಾರ ಅಥವಾ ಆಯಾ ಶಾಲಾ ಕಾಲೇಜು ಆಡಳಿತ ಮಂಡಳಿ ಸೂಚಿಸಿರುವಂತೆ ಸಮವಸ್ತ್ರ ಧರಿಸದ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಗಳಿಗೆ ಪ್ರವೇಶಿಸಲು ಮತ್ತು ತರಗತಿಗಳಿಗೆ ಹಾಜರಾಗಲು ಅವಕಾಶ ನೀಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭಾನುವಾರ ಹೇಳಿದ್ದಾರೆ.
ಹಿಜಾಬ್ ವಿವಾದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆಗಳು ಈ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಬೇಕು ಮತ್ತು ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಳಾಗುತ್ತದೆ ಎಂದು ಶಿಕ್ಷಣ ಸಂಸ್ಥೆಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ನಿರಾಕರಿಸುವ ಉದ್ದೇಶ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಪುನರುಚ್ಚರಿಸಿದ ಅವರು, ವಿದ್ಯಾರ್ಥಿಗಳಲ್ಲಿ ಸಮಾನತೆ ಮತ್ತು ಏಕತೆಯ ಕಲ್ಪನೆಯನ್ನು ಮೂಡಿಸಲು ಏಕರೂಪದ ನಿಯಮಗಳನ್ನು ರೂಪಿಸಲಾಗಿದೆ ಎಂದು ಹೇಳಿದ್ದಾರೆ.