ಹುಬ್ಬಳ್ಳಿ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಜೆಟ್ ಘೋಷಣೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನ ಮಾಡಬೇಕು ಎಂದು ಈಗಾಗಲೇ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದೇನೆ. ಎಲ್ಲಾ ಇಲಾಖೆಗಳು ಹಣಕಾಸು ಇಲಾಖೆಯ ಜೊತೆ ಸಂಪರ್ಕದಲ್ಲಿರಬೇಕು. ಇಲಾಖೆಗಳ ನಡುವೆ ಸಂವಹನಕ್ಕೆ ಅನುಕೂಲವಾಗುವಂತೆ ಸಮಿತಿ ಕೆಲಸ ಮಾಡಲಿದೆ. ಮೊದಲ ಬಾರಿಗೆ ಸಮಿತಿ ರಚಿಸಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ನೀಡುತ್ತಿದೆ. ನವೆಂಬರ್ನಲ್ಲಿ ವಿಶ್ವ ಹೂಡಿಕೆದಾರರ ಸಮಾವೇಶ ಸಂಘಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದೇವೆ. ಕಳೆದ ಮೂರು ತ್ರೈಮಾಸಿಕಗಳ ಅವಧಿಯಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯಲ್ಲಿ ಭಾರತದಲ್ಲಿ ಕರ್ನಾಟಕವೇ ಮೊದಲ ಸ್ಥಾನದಲ್ಲಿದೆ. ವಿದೇಶಿ ಹೂಡಿಕೆದಾರರು ನಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿ ಇದು ಎಂದು ತಿಳಿಸಿದರು.