ಬೆಂಗಳೂರು: ಬಿಎಸ್ ಯಡಿಯೂರಪ್ಪ ಅವರು 2006-07ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಾಡಿದ್ದ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ವಿರುದ್ಧ ‘ವಿಶೇಷ ಕ್ರಿಮಿನಲ್ ಕೇಸ್’ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶಿಸಿದೆ.
ವಾಸುದೇವ ರೆಡ್ಡಿ ಎಂಬುವವರ ಸಲ್ಲಿಸಿದ್ದ ಖಾಸಗಿ ದೂರಿನ ಆಧಾರದ ಮೇಲೆ ಕರ್ನಾಟಕದ ಚುನಾಯಿತ ಸಂಸದರು/ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದ ಸೆಷನ್ಸ್ ನ್ಯಾಯಾಧೀಶ ಬಿ ಜಯಂತ ಕುಮಾರ್ ಅವರು ಮಾರ್ಚ್ 26 ರಂದು ಈ ಆದೇಶ ಹೊರಡಿಸಿದ್ದಾರೆ.
ಯಡಿಯೂರಪ್ಪ ಅವರು ಬೆಳ್ಳಂದೂರು ಹಾಗೂ ದೇವರಬೀಸನಹಳ್ಳಿಯಲ್ಲಿ ಐಟಿ ಕಾರಿಡಾರ್ ಗಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಂಡಿದ್ದ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ ಆರೋಪ ಎದುರಿಸುತ್ತಿದ್ದಾರೆ.
ಯಡಿಯೂರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುವಂತೆ ವಿಶೇಷ ನ್ಯಾಯಾಲಯ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು. ‘ಯಡಿಯೂರಪ್ಪ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ’ ಎಂದು ಲೋಕಾಯುಕ್ತ ಪೊಲೀಸರು ಎರಡು ಬಾರಿ ‘ಬಿ’ ರಿಪೋರ್ಟ್ ಸಲ್ಲಿಸಿದ್ದರು. ಎರಡೂ ವರದಿಗಳನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಎರಡನೇ ‘ಬಿ’ ರಿಪೋರ್ಟ್ ಅನ್ನು 2021ರ ನವೆಂಬರ್ 27ರಂದು ತಿರಸ್ಕರಿಸಿದ್ದ ನ್ಯಾಯಾಲಯ, ನೇರವಾಗಿ ವಿಚಾರಣೆ ಆರಂಭಿಸುವ ತೀರ್ಮಾನ ಪ್ರಕಟಿಸಿತ್ತು.