ಕಾರ್ಕಳ : ಪ್ರತಿಯೊಬ್ಬರೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಸರಕಾರ ಜನತೆಯ ಆರೋಗ್ಯ ಕಾಳಜಿಯಿಂದ ಪ್ರತಿ ತಾಲೂಕಿನಲ್ಲೂ ಆರೋಗ್ಯ ಮೇಳ ನಡೆಸುತ್ತಿದೆ ಎಂದು ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.
ಅವರು ಎ. 25ರಂದು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಕಳ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಮತ್ತು ವಿವಿಧ ಇಲಾಖೆಗಳ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕೊರೊನಾ ಕಾಲಘಟ್ಟದಲ್ಲಿ ಜನ ಜೀವನ ಅಸ್ತವ್ಯಸ್ಥವಾಗಿ ಬದುಕು ದುಸ್ತರವಾಗಿತ್ತು. ಆರೋಗ್ಯ ಇಲಾಖೆಯ ಕಾರ್ಯಕರ್ತರು ಕೊರೊನಾ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಮ್ಮ ದೇಶದಲ್ಲಿ ಲಸಿಕಾಕರಣ ಯಶಸ್ವಿಯಾದ ಕಾರಣ ಹೆಚ್ಚಿನ ಸಾವು ನೋವು ಸಂಭವಿಸಿಲ್ಲ. ಆರೋಗ್ಯ ಕುರಿತಂತೆ ಎಲ್ಲರಲ್ಲೂ ವಿಶೇಷ ಕಾಳಜಿಯಿರಬೇಕೆಂದು ಸುನಿಲ್ ಕುಮಾರ್ ಹೇಳಿದರು.
ಜಿಲ್ಲಾ ಆಸ್ಪತ್ರೆ ವ್ಯವಸ್ಥೆ
ಕಾರ್ಕಳ ಸರಕಾರಿ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಅಭಿವೃದ್ಧಿಪಡಿಸಿ ಸಕಲ ಸೌಕರ್ಯ ಕಲ್ಪಿಸಲಾಗಿದೆ ಎಂದು ಸುನಿಲ್ ಕುಮಾರ್ ಹೇಳಿದರು.
ಸನ್ಮಾನ
ದಾನಿ ಜಗದೀಶ್ ಮಲ್ಯ ಅವರನ್ನು ಇದೇ ಸಂದರ್ಭದಲ್ಲಿ ಸಚಿವ ಸುನಿಲ್ ಕುಮಾರ್ ಸನ್ಮಾನಿಸಿದರು.

ನೇತ್ರ ದಾನ – ವಾಗ್ದಾನ
ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ತಾಲೂಕು ಆರೋಗ್ಯಧಿಕಾರಿ, ಪುರಸಭಾ ಸದಸ್ಯರು ಸೇರಿದಂತೆ ಅನೇಕರು ನೇತ್ರದಾನ ಪತ್ರಕ್ಕೆ ಸಹಿ ಹಾಕಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಗೇರು ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗುರುದತ್, ಪುರಸಭಾ ಅಧ್ಯಕ್ಷೆ ಸುಮಾ ಕೇಶವ್, ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಮುಖ್ಯಾಧಿಕಾರಿ ರೂಪಾ ಶೆಟ್ಟಿ, ಜಿಲ್ಲಾ ಆಯುಷ್ ವಿಭಾಗದ ಮುಖ್ಯಸ್ಥ ಡಾ. ಸತೀಶ್ ಆಚಾರ್ಯ, ವೃತ್ತ ನಿರೀಕ್ಷಕ ಸಂಪತ್ ಕುಮಾರ್, ಆಸ್ಪತ್ರೆ ವೈದ್ಯಾಧಿಕಾರಿ ಡಾ. ಕೆ.ಎಸ್. ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಗೋಪಾಲಶೆಟ್ಟಿ ಸ್ವಾಗತಿಸಿ, ಹಿರಿಯ ಕ್ಷಯರೋಗ ನಿಯಂತ್ರಣಾಧಿಕಾರಿ ಶಿವಕುಮಾರ್ ಪ್ರಾರ್ಥಿಸಿದರು. ಗಣೇಶ್ ಗಂಗೊಳ್ಳಿ ಅವರ ತಂಡ ನಾಡಗೀತೆ ಹಾಡಿದರು. ಶಿಕ್ಷಕ ಸಂಜಯ್ ಕುಮಾರ್ ನಿರೂಪಿಸಿ, ಕೃಷ್ಣಾನಂದ ಶೆಟ್ಟಿ ವಂದಿಸಿದರು.