ಕಾರ್ಕಳ : ಸರಿಯಾದ ವ್ಯವಸ್ಥೆ ಕಲ್ಪಿಸದೇ ನಿರ್ಲಕ್ಷ್ಯ ವಹಿಸುವುದರಿಂದ ಕನ್ನಡ ಮಾಧ್ಯಮ ಶಾಲೆಗಳು ಅವನತಿಯತ್ತ ಸಾಗುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಅಭಿಪ್ರಾಯಪಟ್ಟರು. ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ ದಿನೇಶ್ ಯು.ಎಸ್. ಅವರಿಗೆ ನಡೆದ ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು ಬೇರೆ ಬೇರೆ ಕ್ಷೇತ್ರಗಳು ಕಾಲಕ್ಕನುಗುಣವಾಗಿ ಬದಲಾದರೂ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಯಾವುದೇ ಬದಲಾವಣೆಯಾಗುತ್ತಿಲ್ಲ. ಸರಕಾರಿ ಶಾಲೆಗೆ ಮೂಲ ಸೌಕರ್ಯ ಒದಗಿಸುತ್ತಿಲ್ಲ. ಶಿಕ್ಷಕರ ಕೊರತೆಯನ್ನು ನೀಗಿಸುತ್ತಿಲ್ಲ. ಹಾಗಾಗಿ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಹೆತ್ತವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವಾಗ ಶಾಲೆಯಲ್ಲಿರುವ ಸೌಲಭ್ಯಗಳನ್ನು ಪರಿಶೀಲಿಸುತ್ತಾರೆ ಎಂದವರು ಹೇಳಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ದಿನೇಶ್ ಯು.ಎಸ್., ಅಂಕ ಗಳಿಸುವುದೇ ಸಾಧನೆಯಲ್ಲ. ಅದರೊಂದಿಗೆ ಸಮಾಜದಲ್ಲಿ ನಾಗರೀಕರಾಗಿ ಬದುಕುವುದು ಮುಖ್ಯ. ವಿದ್ಯಾರ್ಥಿಗಳು ತಮ್ಮನ್ನು ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳದೇ ನೀವು ನೀವಾಗಿಯೇ ಬೆಳೆಯುತ್ತ ಯಶಸ್ವಿಯಾಗಬೇಕೆಂದರು.
ಸನ್ಮಾನ
ಶಿಕ್ಷಣ ಪ್ರೇಮಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಸನ್ಮಾನ ಸ್ವೀಕರಿಸಿದರು. ಶಾಲೆಯ ಹಳೆ ವಿದ್ಯಾರ್ಥಿಗಳನ್ನು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಇದೇ ಸಂದರ್ಭ ಸನ್ಮಾನಿಸಿ ಅಭಿನಂದಿಸಲಾಯಿತು. ಮಡಿಬೆಟ್ಟು ಶಾಲೆಯ ನಿವೃತ್ತ ಶಿಕ್ಷಕ ಬಿ. ಕೃಷ್ಣ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿ, ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಚಾಲಕ ಕೆ. ನವೀನ್ ಚಂದ್ರ ಹೆಗ್ಡೆ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ. ಎಂ.ಬಿ. ಆಚಾರ್, ಪ್ರಭಾರ ಮುಖ್ಯ ಶಿಕ್ಷಕ ಉಮೇಶ್ ನಾಯಕ್ ಪೆರಣಂಕಿಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ಪ್ರಭು, ನೀರೆ ಗ್ರಾ.ಪಂ. ಅಧ್ಯಕ್ಷೆ ಶಾಲಿನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿವಪ್ರಸಾದ್ ಹೆಗ್ಡೆ ಸ್ವಾಗತಿಸಿ, ಹಳೆ ವಿದ್ಯಾರ್ಥಿ ಸಂಘದ ವರದಿ ಹಾಗೂ ಲೆಕ್ಕಪತ್ರ ಮಂಡಿಸಿದರು. ವಿಕ್ರಂ ಹೆಗ್ಡೆ ಪ್ರಸ್ತಾವನೆಗೈದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಉಮೇಶ್ ನಾಯಕ್ ವರದಿ ವಾಚಿಸಿದರು. ಶಿಕ್ಷಕರಾದ ಸವಿತಾ ನಾಯಕ್, ಮನೋಹರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಟ್ರಸ್ಟಿ ಸತೀಶ್ ಪೂಜಾರಿ ವಂದಿಸಿದರು.
ಸರಕಾರದ ನಿರ್ಲಕ್ಷ್ಯದಿಂದ ಕನ್ನಡ ಮಾಧ್ಯಮ ಶಾಲೆಗಳು ಅವನತಿಯತ್ತ : ಮೋಹನ್ ಆಳ್ವ






























































