ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತು ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕಾನೂನು ತಜ್ಞರ ಜತೆ ಸಭೆ ನಡೆಸಿದರು. ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆ ಕುರಿತು ಚರ್ಚೆ ನಡೆಸಿಲ್ಲ. ಆದರೆ ಮುಖ್ಯಮಂತ್ರಿಗಳ ಜತೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಾಗಿದೆ. ಹಿಂದುಳಿದ ವರ್ಗಕ್ಕೆ ಈ ಹಿಂದಿನ ಮೀಸಲಾತಿ ಅನ್ವಯವಾದರೂ ಸರಿ ಅಥವಾ ಹೊಸದಾಗಿ ಸರ್ಕಾರ ರೂಪಿಸುತ್ತಿರುವ ಮೀಸಲಾತಿ ಅನ್ವಯವಾದರೂ ಸರಿ ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಗೆ ಮನವಿ ಮಾಡುತ್ತೇವೆ ಎಂದು ಜೆ.ಸಿ.ಮಾಧುಸ್ವಾಮಿ ತಿಳಿಸಿದರು. ಮೀಸಲಾತಿ ನಿಗದಿ ಮಾಡುವ ಸಂಬಂಧ ನ್ಯಾ.ಭಕ್ತವತ್ಸಲಂ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ವರದಿಯನ್ನು ಆದಷ್ಟು ಬೇಗ ನೀಡುವಂತೆ ತಿಳಿಸಲಾಗಿದೆ. ಸಮಿತಿಯು ವರದಿ ನೀಡಲು ಸಮಯ ತೆಗೆದುಕೊಳ್ಳುವುದರಿಂದ ಮೂರು ತಿಂಗಳಾದರೂ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲು ತೀರ್ಮಾನಿಸಲಾಗಿದೆ.
Recent Comments
ಕಗ್ಗದ ಸಂದೇಶ
on