ಇಂದು ಮೋದಿ ರಾಜ್ಯಕ್ಕಾಗಮನ : ಎಲ್ಲೆಡೆ ಬಿಗು ಭದ್ರತೆ

ಬೆಂಗಳೂರು : ಅಂತಾರಾಷ್ಟ್ರೀಯ ಯೋಗ ದಿನಾಚರಣೆಯೂ ಸೇರಿ ಎರಡು ದಿನಗಳಲ್ಲಿ ಸುಮಾರು ಹತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ರಾಜ್ಯಕ್ಕಾಗಮಿಸಲಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಗೆ ಯಲಹಂಕ ವಾಯುನೆಲೆಗೆ ಬಂದಿಳಿಯುವುದರೊಂದಿಗೆ ಮೋದಿಯವರ ಎರಡು ದಿನಗಳ ಕರ್ನಾಟಕ ಪ್ರವಾಸ ಆರಂಭವಾಗಲಿದೆ. ಇದಕ್ಕಾಗಿ ಎಲ್ಲೆಡೆ ಭರ್ಜರಿ ತಯಾರಿ ನಡೆಸಲಾಗಿದೆ.
ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆ, ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಡಾ| ಬಿ.ಆರ್‌. ಅಂಬೇಡ್ಕರ್‌ ಸ್ಕೂಲ್‌ ಆಫ್‌ ಎಕನಾಮಿಕ್‌ ಹಾಗೂ ಕೆಂಗೇರಿ ಸಮೀಪದ ಕೊಮ್ಮಘಟ್ಟದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಇಂದು ಭಾಗವಹಿಸಲಿದ್ದಾರೆ.
ಮಂಗಳವಾರ ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಭಾಗವಹಿಸುವುದರೊಂದಿಗೆ ಎರಡು ದಿನಗಳ ಪ್ರವಾಸ ಸಮಾಪನಗೊಳ್ಳುತ್ತದೆ.
ಸೇನಾ ನೇಮಕಾತಿ ಯೋಜನೆ ಅಗ್ನಿಪಥ್‌ ವಿರೋಧಿಸಿ ಕೆಲ ಸಂಘಟನೆಗಳು ಭಾರತ್‌ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಮೋದಿ ಅವರು ಪಾಲ್ಗೊಳ್ಳುವ ಕಾರ್ಯಕ್ರಮಗಳಿಗೆ ಮತ್ತು ಅವರು ಸಂಚರಿಸುವ ಪ್ರದೇಶಗಳಿಗೆ ಮುಂಜಾಗ್ರತಾ ಕ್ರಮವಾಗಿ ಸುಮಾರು 10 ಸಾವಿರಕ್ಕೂ ಅಧಿಕ ಪೊಲೀಸರನ್ನು ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಪ್ರಧಾನ ಮಂತ್ರಿ ಪಾಲ್ಗೊಳ್ಳುವ ಕಾರ್ಯಕ್ರಮಗಳ ಸುತ್ತಮುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುವವರು ಅನ್ಯ ಮಾರ್ಗವನ್ನು ಬಳಸುವಂತೆ ಸೂಚಿಸಲಾಗಿದೆ. ಮೈಸೂರು-ಬೆಂಗಳೂರು ರಸ್ತೆ ಮತ್ತು ವಿಮಾನ ನಿಲ್ದಾಣ ರಸ್ತೆಯಲ್ಲಿ ಘನ ವಾಹನ ಸಂಚಾರ ನಿಷೇಧಸಲಾಗಿದೆ. ಪ್ರಧಾನಿಮಂತ್ರಿ ಸಂಚರಿಸುವ ಮಾರ್ಗದ ಉದ್ದಕ್ಕೂ ನಿನ್ನೆಯಿಂದಲೇ ಪೊಲೀಸರನ್ನು ಕಾವಲು ಹಾಕಲಾಗಿದೆ. ಪ್ರಧಾನಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳ ವೇಳೆ ಕೆಲವರು ಪ್ರತಿಭಟನೆ ನಡೆಸಬಹುದು ಎಂದು ಸರ್ಕಾರಕ್ಕೆ ಗುಪ್ತಚರ ವರದಿ ಸಲ್ಲಿಸಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿಗಳ ಕಾರ್ಯಕ್ರಮಗಳಿಗೆ ಹದ್ದಿನ ಕಣ್ಣಿಡಲಾಗಿದೆ.

ಬೊಮ್ಮಾಯಿ ಕೋವಿಡ್‌ ಪರೀಕ್ಷೆ
ಮೋದಿ ಭೇಟಿ ಹಿನ್ನೆಲೆಯಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಕೂಡ ಕೈಗೊಳ್ಳಲಾಗಿದೆ. ಪಿಎಂ ಕಾರ್ಯಕ್ರಮದಲ್ಲಿ ಭಾಗಿಯಾಗುವವರು ಕಡ್ಡಾಯ ಕೋವಿಡ್ ಟೆಸ್ಟ್ ಗೆ ಒಳಗಾಗಿರಬೇಕೆಂದು ಸೂಚಿಸಲಾಗಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಿನ್ನೆಯೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಅವರ ವರದಿ ನೆಗೆಟಿವ್‌ ಬಂದಿದೆ.
ಮುಖ್ಯಮಂತ್ರಿ ಅವರ ಆರ್. ಟಿ ನಗರ ನಿವಾಸಕ್ಕೆ ಆಗಮಿಸಿದ ಆರೋಗ್ಯ ಸಿಬ್ಬಂದಿ ಕೋವಿಡ್ ಪರೀಕ್ಷೆ ನಡೆಸಿದರು.





























































































































































































































error: Content is protected !!
Scroll to Top