ತುಮಕೂರು : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಈಗ ಇಬ್ಬರ ಮೇಲೆ ಕೈ ಹಾಕಿಕೊಂಡು ಹೋಗುತ್ತಿದ್ದಾರೆ. ನಾಲ್ವರ ಮೇಲೆ ಹೋಗುವುದು ಹತ್ತಿರದಲ್ಲೇ ಇದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಹೇಳಿಕೆ ವಿವಾದಕ್ಕೆ ಸಿಲುಕಿದೆ.
ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮದಲ್ಲಿ ಗುರುವಾರ ಸಾರ್ವಜನಿಕರೊಂದಿಗೆ ಮಾತನಾಡುವಾಗ ರಾಜಣ್ಣ ನಾಲಗೆ ಹರಿ ಬಿಟ್ಟಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ರಾಜಣ್ಣ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿದೆ. ರಾಜಣ್ಣ ಹೇಳಿಕೆಯ ವಿಡಿಯೊವನ್ನು ನೆಟ್ಟಿಗರು ಹಂಚಿಕೊಂಡಿದ್ದು, ಕಿಡಿಕಾರಿದ್ದಾರೆ. ಇಂತಹ ಹೇಳಿಕೆ ನೀಡುವುದು ಸರಿಯೆ ಎಂದು ಪ್ರಶ್ನಿಸಿದ್ದಾರೆ. ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
‘ಇದು ನನ್ನ ಕಡೆಯ ಚುನಾವಣೆಯಾಗಿದ್ದು, ಪ್ರತಿ ಮನೆ ಬಾಗಿಲಿಗೆ ಬಂದು ಮತ ಕೇಳುತ್ತೇನೆ. ನಾನು ಶಾಸಕನಾದರೆ ನೀವು ಶಾಸಕರಾದಂತೆ. ಸರ್ಕಾರದ ಸೇವೆ ಒದಗಿಸದ ಎಲ್ಲ ಅಧಿಕಾರಿಗಳನ್ನು ಪ್ರಶ್ನೆ ಮಾಡಬಹುದು. ಶೋಕಿಗೆ ರಾಜಕಾರಣ ಮಾಡಬೇಡಿ’ ಎಂದು ರಾಜಣ್ಣ ಹೇಳಿದ್ದಾರೆ.