ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಇದಕ್ಕಾಗಿ ಸರ್ವ ತಯಾರಿ ಮಾಡಿಕೊಳ್ಳಲಾಗಿದೆ. ಮೋದಿ ಜತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ರಾಜ್ಯದ ಹಲವು ಸಚಿವರು, ಶಾಸಕರು ಭಾಗವಹಿಸಲಿರುವುದುರಿಂದ ಇಡೀ ಮಂಗಳೂರು ನಗರ ಕಾರ್ಯಕ್ರಮಕ್ಕೆ ಸಿದ್ಧವಾಗಿದೆ. ಗೃಹ ಸಚಿವ ಆರಗ ಜ್ಞಾನೆಂದ್ರ ಸೆ.2ರಂದು ಆಗಮಿಸಿದ್ದಾರೆ.
ಮೋದಿ ಕಾರ್ಯಕ್ರಮದ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಬಿಡುವಿಲ್ಲದೆ ಓಡಾಡುತ್ತಿದ್ದಾರೆ. ನವಮಂಗಳೂರು ಬಂದರು ಪ್ರಾಧಿಕಾರ(ಎನ್ಎಂಪಿಎ)ದ ಆವರಣ ಮತ್ತು ಗೋಲ್ಡ್ ಫಿಂಚ್ ಸಿಟಿಯಲ್ಲಿ ಭರದ ಸಿದ್ಧತೆ ನಡೆದಿದೆ. ಕರಾವಳಿಯ ಎಲ್ಲ ಬಿಜೆಪಿ ಶಾಸಕರು ಮೋದಿ ಕಾರ್ಯಕ್ರಮದ ತಯಾರಿಯಲ್ಲಿ ವ್ಯಸ್ತರಾಗಿದ್ದಾರೆ.
ಪ್ರಧಾನಿ ಮೋದಿ ಅವರು ಶುಕ್ರವಾರ ಮಧ್ಯಾಹ್ನ 12.55ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 3,800 ಕೋಟಿ ರೂ. ಯೋಜನೆಗೆ ಚಾಲನೆ ನೀಡಲಿದ್ದಾರೆ. ಮಂಗಳೂರಿನ ಗೋಲ್ಡ್ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಫಲಾನುಭವಿಗಳ ಸಮಾವೇಶದಲ್ಲಿ ಮೋದಿ ಮಾತನಾಡನಾಡಲಿದ್ದಾರೆ.
ಕೂಳೂರಿನಲ್ಲಿರುವ ಗೋಲ್ಡ್ಫಿಂಚ್ ಸಿಟಿಯಲ್ಲಿ ಕಂಟೈನರ್ಗಳು ಮತ್ತು ಇತರ ಸರಕುಗಳನ್ನು ನಿರ್ವಹಿಸಲು ಕೋ. ರೂ. 281 ವೆಚ್ಚದಲ್ಲಿ ನಿರ್ಮಾಣವಾಗಿರುವ ನವಮಂಗಳೂರು ಬಂದರಿನ 14ನೇ ಬರ್ತ್ ಯಾಂತ್ರೀಕರಣವನ್ನು ರಾಷ್ಟ್ರಕ್ಕೆ ಅರ್ಪಿಸುತ್ತಾರೆ. ನಂತರ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್(MRPL)ನ ಬಿಎಸ್ VI ಉನ್ನತೀಕರಣ ಯೋಜನೆ ಮತ್ತು ಸಮುದ್ರದ ಉಪ್ಪು ನೀರನ್ನು ಸಂಸ್ಕರಿಸಿ ಬಳಸಿಕೊಳ್ಳುವ ಮಹತ್ವದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಜೆ 4.20ಕ್ಕೆ ದೆಹಲಿಗೆ ತೆರಳಲಿದ್ದಾರೆ.
ಮೋದಿ ಆಗಮನಕ್ಕೆ ಕ್ಷಣಗಣನೆ ಆರಂಭ


























