ಕಾರ್ಕಳ: ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕಾರ್ಕಳ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ ಮತ್ತು ಬಾಲಕಿಯರ ಫುಟ್ಬಾಲ್ ಪಂದ್ಯಾಟ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಿತು. ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕೆ.ಪಿ. ಲಕ್ಷ್ಮೀನಾರಾಯಣ ಅವರು ದೀಪ ಬೆಳಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳು ಕಲಿಕೆಯ ಸಂದರ್ಭದಲ್ಲಿ ಪಠ್ಯ ಮತ್ತು ಪಠ್ಯೇತರ ಎರಡರಲ್ಲೂ ತೊಡಗಿಸಿಕೊಳ್ಳಬೇಕು. ಕ್ರೀಡೆ ನಮ್ಮ ದೈಹಿಕ ಕ್ಷಮತೆ ಕಾಪಾಡಿಕೊಳ್ಳುವಲ್ಲಿ ಅತ್ಯಂತ ಪ್ರಯೋಜನಕಾರಿ. ನಿರಂತರ ಅಭ್ಯಾಸ ನಡೆಸಿದರೆ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಅವರು ಮಾತನಾಡಿ “ಕ್ರೀಡೆ ಮನುಷ್ಯನ ದೈಹಿಕ ಮತ್ತು ಮಾನಸಿಕ ವಿಕಸನಕ್ಕೆ ಪೂರಕ. ವ್ಯಕ್ತಿಯ ಜೀವನದಲ್ಲಿ ಕ್ರೀಡೆ ಅವಿಭಾಜ್ಯ ಅಂಗ. ಕಾರ್ಕಳದ ಫುಟ್ಬಾಲ್ ಪ್ರತಿಭೆಗಳು ದೇಶ ವಿದೇಶಗಳಲ್ಲಿ ಮಿಂಚುವಂತೆ ಆಗಬೇಕು ಎಂದರು. ಸಂಸ್ಥೆಯ ಶಿಕ್ಷಕ– ರಕ್ಷಕ ಸಂಘದ ಅಧ್ಯಕ್ಷ ವಿವೇಕಾನಂದ ಶೆಣೈ, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ಚಂದ್ರ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕ್ರೈಸ್ಟ್‌ಕಿಂಗ್ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ಪ್ರಸಾದ್ ವಂದಿಸಿದರು.































