ಬೆಂಗಳೂರು : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಬೇಡಿಕೆಗೆ ರಾಜ್ಯ ಸರ್ಕಾರವು ಸ್ಪಂದಿಸಿದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡದ ನಿಯೋಗ ಅ. 17ರಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಪರಿಶಿಷ್ಟ ಜಾತಿಗೆ ಇದ್ದ ಶೇ. 15 ಮೀಸಲಾತಿಯನ್ನು ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಇದ್ದ ಶೇ.3 ಮೀಸಲಾತಿಯನ್ನು ಶೇ. 7 ಕ್ಕೆ ಸರಕಾರ ಹೆಚ್ಚಳ ಮಾಡಿತ್ತು.

ಇಂಧನ ಹಾಗೂ ಕನ್ನಡ ಸಂಸ್ಕೃತಿ ಸಚಿವರ ಮೂಲಕ ಸಿಎಂ ಅವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಉಡುಪಿ ಜಿಲ್ಲೆಯ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ್ ಗೌಡ ಈದು, ಎಸ್ಸಿ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ಎಸ್ ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯಕ್, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಗೋಪಾಲ್ ಪಳಂಜಿ, ಎಸ್ ಟಿ ಮೋರ್ಚಾದ ಜಿಲ್ಲಾಧ್ಯಕ್ಷ ನಿತ್ಯಾನಂದ ನಾಯಕ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.