ಎಲ್ಲ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷ ಧ್ಯಾನ ಕಡ್ಡಾಯ- ಶಿಕ್ಷಣ ಸಚಿವ ಬಿಸಿ ನಾಗೇಶ್ ಸೂಚನೆ

ಬೆಂಗಳೂರು: ಕರ್ನಾಟಕದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷ ಕಡ್ಡಾಯವಾಗಿ ಧ್ಯಾನದ ಅಭ್ಯಾಸ ಮಾಡಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ. ಮಕ್ಕಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನ ಮಾಡಿಸುವುದು ಅಗತ್ಯವಾಗಿರುತ್ತದೆ ಎಂದು ಸಚಿವ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. ಧ್ಯಾನದ ಅಭ್ಯಾಸವು ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಈಗಾಗಲೇ ಧ್ಯಾನವನ್ನು ಮಾಡಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿರುತ್ತಾರೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ. ‘ವಿದ್ಯಾರ್ಥಿಗಳಿಗೆ ಪ್ರತಿದಿನ ನಿಯಮಿತವಾಗಿ ಧ್ಯಾನ ಮಾಡಿಸುವುದು ಸೂಕ್ತವಾಗಿರುತ್ತದೆ. ರಾಜ್ಯದಲ್ಲಿನ ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಸಮಯ ನಿಗದಿಪಡಿಸಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ’ ಎಂದು ಅವರು ಸುತ್ತೋಲೆಯಲ್ಲಿ ಹೇಳಿದ್ದಾರೆ.

ಇದು ಯೋಗ, ಪ್ರಾಣಾಯಾಮವನ್ನು ಒಳಗೊಂಡಿರುತ್ತದೆಯೇ ಅಥವಾ ಕೇವಲ ಧ್ಯಾನ ಮಾತ್ರವೇ ಎನ್ನುವ ಬಗ್ಗೆ ಸುತ್ತೋಲೆಯಲ್ಲಿ ಸ್ಪಷ್ಟ ಸೂಚನೆ ಇಲ್ಲ. ಬಹುಶಃ ಇದನ್ನು ಸ್ಥಳೀಯ ಮಟ್ಟದಲ್ಲಿ ನಿರ್ಧರಿಸಬಹುದು ಎಂದು ಹೇಳಲಾಗುತ್ತಿದೆ. ಧ್ಯಾನದಲ್ಲಿ ಹಲವು ರೀತಿಗಳಿದ್ದು ಶಿಕ್ಷಣ ಸಚಿವರು ಯಾವ ರೀತಿಯ ಧ್ಯಾನದ ಬಗ್ಗೆ ಹೇಳುತ್ತಿದ್ದಾರೆ ಎನ್ನುವ ಬಗ್ಗೆಯೂ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ಶೀಘ್ರ ಸರ್ಕಾರಿ ಆದೇಶದಲ್ಲಿ ಸ್ಪಷ್ಟ ಮಾಹಿತಿ ಸಿಗಬಹುದು ಎಂದು ಹೇಳಲಾಗುತ್ತಿದೆ.error: Content is protected !!
Scroll to Top