ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ವಿವಾದಾತ್ಮಕ ಹೇಳಿಕೆ
ಬೆಳಗಾವಿ : ಕಾಂಗ್ರೆಸ್ ನಾಯಕಿ ಲಲಿತಾ ನಾಯಕ್ ದೈವಾರಾಧನೆ ಮತ್ತು ದೇವಸ್ಥಾನಗಳಲ್ಲಿ ತೀರ್ಥ ಸೇವನೆಯನ್ನು ಟೀಕಿಸಿ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಇನ್ನೋರ್ವ ಕಾಂಗ್ರೆಸ್ ನಾಯಕ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿವಾದ ಸೃಷ್ಟಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಮಾನವ ಬಂಧುತ್ವ ವೇದಿಕೆ ಆಯೋಜಿಸಿದ್ದ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತಕ್ಕೂ, ಪರ್ಷಿಯಕ್ಕೂ ಏನು ಸಂಬಂಧ? ಹಿಂದೂ ಭಾರತೀಯ ಪದವೇ ಅಲ್ಲ, ಅದು ಪರ್ಷಿಯನ್ ಪದ. ಹಿಂದೂ ನಮ್ಮದು ಹೇಗೆ ಆಯಿತು ಅನ್ನೋದು ಚರ್ಚೆ ಆಗಬೇಕಿದೆ. ಹಿಂದೂ ಪದದ ಅರ್ಥ ಬಹಳ ಅಶ್ಲೀಲವಾಗಿದೆ. ಅದು ನಿಮಗೆ ತಿಳಿದರೆ ನಿಮಗೆ ನಾಚಿಕೆ ಆಗುತ್ತೆ. ಎಲ್ಲಿಂದಲೋ ಬಂದಿರೋ ಧರ್ಮವನ್ನು ತಂದು ಒತ್ತಾಯಪೂರ್ವಕವಾಗಿ ಹೇರಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ನಾಯಕರು ಶಿವಾಜಿ ಬಗ್ಗೆ ಮಾತನಾಡುತ್ತಾರೆ. ಆದರೆ ಮಹಾತ್ಮಾ ಜ್ಯೋತಿಬಾ ಫುಲೆ ಇಲ್ಲದಿದ್ದರೇ ಛತ್ರಪತಿ ಶಿವಾಜಿ ಅವರ ಇತಿಹಾಸ ಹೊರಗೆ ಬರುತ್ತಿರಲಿಲ್ಲ. ಅವರ ಇತಿಹಾಸವನ್ನು ಮುಚ್ಚಿಡಲಾಗಿತ್ತು. ಸತ್ಯ ಶೋಧಕ ಸಂಸ್ಥೆಯಿಂದ ಅವರ ಇತಿಹಾಸ ಹೊರಗೆ ಬಂದಿದೆ. ಶಿವಾಜಿ ಎಲ್ಲರನ್ನು ಸಮಾನತೆಯಿಂದ ನೋಡುತ್ತಿದ್ದರು. ವಿಶ್ವದಲ್ಲಿ ಶಿವಾಜಿ ಅವರ ಒಂದೇ ಪೇಂಟಿಂಗ್ ಇರುವುದು ಅದನ್ನು ಯಾರೋ ಕುಲಕರ್ಣಿ, ದೇಶಪಾಂಡೆ ಅವರು ತಯಾರಿಸಿಲ್ಲ. ಮೊಹಮ್ಮದ್ ಮದಾರಿ ಎನ್ನುವ ಚಿತ್ರಕಾರ ಆ ಪೇಂಟಿಂಗ್ ತಯಾರಿಸಿದ್ದರು ಎಂದು ತಿಳಿಸಿದ್ದಾರೆ.