ಉಡುಪಿ : ಜಿಲ್ಲೆಯ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟದಲ್ಲಿ ಶಾಲಾ ವಿದ್ಯಾರ್ಥಿಗಳು ಮುಸ್ಲೀಮರ ಆಜಾನ್ಗೆ ನೃತ್ಯ ಮಾಡಿದ್ದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಹಿಂದೂ ಸಂಘಟನೆಗಳಿಂದ ವ್ಯಾಪಾಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಶಾಲೆ ಆಡಳಿತ ಮಂಡಳಿ ಕ್ಷಮೆ ಕೇಳಿದೆ.
ಶಂಕರನಾರಾಯಣದ ಮದರ್ ಥೇರೆಸಾ ಮೆಮೋರಿಯಲ್ ಶಾಲೆಯು ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾಗತ ನೃತ್ಯ ಮಾಡಿದರು. ಸ್ವಾಗತ ನೃತ್ಯದಲ್ಲಿ ಹಿಂದೂ, ಕ್ರೈಸ್ತ, ಇಸ್ಲಾಂ ಮತದ ವಿದ್ಯಾರ್ಥಿಗಳು ಹಾಡುಗಳಿಗೆ ಹೆಜ್ಜೆ ಹಾಕಿದ್ದರು. ಆದ್ರೆ ಅಲ್ಲಾಹು ಅಕ್ಬರ್ (ಆಜಾನ್) ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸ್ವಾಗತ ನೃತ್ಯದಲ್ಲಿ 30 ಸೆಕೆಂಡ್ ಆಜಾನ್ ವಿದ್ಯಾರ್ಥಿಗಳು ನೃತ್ಯ ಮಾಡಿದ್ದಾರೆ. ಯಾರ ಧಾರ್ಮಿಕ ಭಾವನೆಯನ್ನು ಘಾಸಿಗೊಳಿಸುವ ಉದ್ದೇಶ ನಮ್ಮದಾಗಿರಲಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ಉಂಟಾಗಿದ್ದರೇ ಕ್ಷಮೆಯಾಚಿಸುತ್ತೇವೆ ಎಂದು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ವೇದಿಕೆಯಲ್ಲಿದ್ದ ಬಿಜೆಪಿ ಮುಖಂಡ ಉಮೇಶ್ ಶೆಟ್ಟಿ ಕಲ್ಗದೆ ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಆಜಾನ್ ಗೆ ವಿದ್ಯಾರ್ಥಿನಿಯರು ನೃತ್ಯ ಮಾಡಿದ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿದೆ.
ಹಿಂದೂ, ಕ್ರೈಸ್ತ, ಮುಸ್ಲಿಂ ಹಾಡಿಗೆ ಮಕ್ಕಳ ನೃತ್ಯ : ಹಿಂದು ಸಂಘಟನೆಗಳ ಆಕ್ರೋಶ
