ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ರೋಣ-ಗದಗ ಕ್ಷೇತ್ರದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನ. 25 ರಂದು ಬೆಂಗಳೂರಿನ ಹೊರವಲಯದ ರೆಸಾರ್ಟ್ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಗೆ ಬಂದಿದ್ದ ಶ್ರೀಶೈಲಪ್ಪ ಅವರು ಸಭೆ ಆರಂಭದಲ್ಲೇ ವಾಂತಿಯಾಗಿ ಕುಸಿದುಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಶ್ರೀಶೈಲಪ್ಪ ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ರೋಣ ಮತ್ತು ಗದಗ ಕ್ಷೇತ್ರಗಳಿಂದ ಬಿಜೆಪಿಯಿಂದ ತಲಾ ಒಂದು ಬಾರಿ ಶಾಸಕರಾಗಿದ್ದ ಶ್ರೀಶೈಲಪ್ಪ ಅವರಿಗೆ 2018ರಲ್ಲಿ ಟಿಕೆಟ್ ನಿರಾಕರಿಸಿತ್ತು. ಹೀಗಾಗಿ 2019ರಲ್ಲಿ ಅವರು ಕಾಂಗ್ರೆಸ್ ಸೇರಿದ್ದು ಟಿಕೆಟ್ ಕೋರಿ ಕೆಪಿಸಿಸಿಗೆ ಅರ್ಜಿ ಸಲ್ಲಿಸಿದ್ದರು. ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನದಿಂದಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಂದೂಡಿದ್ದು, ನವೆಂಬರ್ 27ರಂದು ಜೂಮ್ ಮೂಲಕ ಸಭೆ ನಿಗದಿ ಮಾಡಿದ್ದಾರೆ.