Thursday, December 1, 2022
spot_img
Homeಸುದ್ದಿವಿನಯ ಸಾಮರಸ್ಯ ಯೋಜನೆ ಡಿಸೆಂಬರ್‌ನಲ್ಲಿ ಶುರು

ವಿನಯ ಸಾಮರಸ್ಯ ಯೋಜನೆ ಡಿಸೆಂಬರ್‌ನಲ್ಲಿ ಶುರು

ಅಸ್ಪೃಶ್ಯತೆ ನಿವಾರಣೆಗಾಗಿ ವಿನೂತನ ಕಾರ್ಯಕ್ರಮ

ಬೆಂಗಳೂರು: ಅಸ್ಪೃಶ್ಯತೆ ನಿವಾರಣೆಗಾಗಿ ರೂಪಿಸಲಾಗಿರುವ ‘ವಿನಯ ಸಾಮರಸ್ಯʼ ಯೋಜನೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ವಿನಯ ಸಾಮರಸ್ಯ ಯೋಜನೆ ಚಾಲನಾ ಸಮಾವೇಶ ಸಂಬಂಧ ಗುರುವಾರ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಮೂಲಕ ಸಭೆ ನಡೆಸಿ ಇ ಮಾಹಿತಿ ನೀಡಿದ್ದಾರೆ.
ಅಸ್ಪೃಶ್ಯತೆಯಂತಹ ಅನಿಷ್ಟ ಪದ್ಧತಿಯನ್ನು ಅನುಭವಿಸುವವರಿಗಿಂತ ಅನುಸರಿಸುವವರಲ್ಲಿ ಜಾಗೃತಿ ಮೂಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟೇತರ ಸಮುದಾಯಗಳ ಧುರೀಣರು, ಮಠಾಧಿಪತಿಗಳು, ಧಾರ್ಮಿಕ ಮುಖಂಡರನ್ನು ಸಮಾವೇಶಕ್ಕೆ ಆಹ್ವಾನಿಸಬೇಕು. ಈ ಮೂಲಕ ಅಸ್ಪೃಶ್ಯತೆ ನಿವಾರಣೆಯ ಜಾಗೃತಿ ಸಮಾವೇಶ ಅರ್ಥಪೂರ್ಣವಾಗಿ ಯಶಸ್ವಿಯಾಗಬೇಕು ಎಂದಿದ್ದಾರೆ.
ಬೆಂಗಳೂರು ಅಥವಾ ಕೊಪ್ಪಳದಲ್ಲಿ ಸಮಾವೇಶ ಹಮ್ಮಿಕೊಳ್ಳುವ ಬಗ್ಗೆ ಸದ್ಯದಲ್ಲೆ ಸ್ಥಳ ಹಾಗೂ ದಿನಾಂಕ ಅಂತಿಮಗೊಳಿಸಲಾಗುವುದು. ಬೃಹತ್ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿನಯ ಸಾಮರಸ್ಯ ಯೋಜನೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.
ಪ್ರತಿ ಗ್ರಾಮ ಪಂಚಾಯತ್‌ ಹಂತದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಕ್ಕೆ ತರಬೇಕಿದ್ದು, ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮ ಅನುಷ್ಠಾನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಚಾಲನಾ ಸಮಾವೇಶವನ್ನು ಅರ್ಥಪೂರ್ಣ ಯಶಸ್ವಿಗೊಳಿಸಲು ಶ್ರಮಿಸಬೇಕೆಂದು ಸಚಿವರು ಸೂಚಿಸಿದ್ದಾರೆ.
2021 ಸೆಪ್ಟೆಂಬರ್‌ನಲ್ಲಿ ಕೊಪ್ಪಳ ಜಿಲ್ಲೆ ಮಿಯಾಪುರದಲ್ಲಿ ದಲಿತ ಸಮುದಾಯದ ನಾಲ್ಕು ವರ್ಷದ ಬಾಲಕ ವಿನಯ್ ಮಾರುತಿ ದೇವಸ್ಥಾನ ಪ್ರವೇಶಿಸಿದ್ದನ್ನು ವಿರೋಧಿಸಿ ಗ್ರಾಮದ ಸವರ್ಣೀಯರು ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿ ಊರಿಂದ ಬಹಿಷ್ಕಾರ ಹಾಕಿದ ಪ್ರಕರಣ ಬೆಳಕಿಗೆ ಬಂದಿತ್ತು. ಸುದ್ದಿ ತಿಳಿದ ಜಿಲ್ಲಾಡಳಿತ ಹಾಗೂ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿದ್ದರು. ನಂತರ ವಿನಯ್ ಹೆಸರಿನಲ್ಲಿ ಅಸ್ಪೃಶ್ಯತೆ ನಿವಾರಣೆಯ ವಿನಯ ಸಾಮರಸ್ಯ ಯೋಜನೆಯನ್ನು ಸರ್ಕಾರ ಘೋಷಿಸಿದೆ.

LEAVE A REPLY

Please enter your comment!
Please enter your name here

Most Popular

error: Content is protected !!