ಬೆಂಗಳೂರು: ದೇಶದಲ್ಲಿ ಕೊರೋನಾ ರೂಪಾಂತರಿ ಬಿಎಫ್7 ಪತ್ತೆ ಹಿನ್ನೆಲೆಯಲ್ಲಿ ಬೆಂಗಳೂರಲ್ಲಿ ವಿದೇಶಗಳಿಂದ ಬರುತ್ತಿರುವವರ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಈ ಬೆಳವಣಿಗೆ ನಡುವಲ್ಲೇ ಚೀನಾದಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದು ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ನಿನ್ನೆ ಚೀನಾದಿಂದ ಬೆಂಗಳೂರಿಗೆ ಬಂದಿದ್ದ 35 ವರ್ಷದ ವ್ಯಕ್ತಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಪರೀಕ್ಷೆ ವೇಳೆ ಕೊರೋನಾ ಪಾಸಿಟಿವ್ ಇರುವುದು ಕಂಡು ಬಂದಿದೆ.
ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸೋಲೇಷನ್ಗೆ ಒಳಪಡಿಸಲಾಗಿದೆ.

ಇದೀಗ ವ್ಯಕ್ತಿಯಲ್ಲಿ ಪತ್ತೆಯಾಗಿರುವುದು ಕೊರೋನಾ ರೂಪಾಂತರಿ ಬಿಎಫ್7 ಅಥವಾ ಕೇವಲ ಕೋವಿಡ್ ಸೋಂಕೇ ಎಂಬುದನ್ನು ತಿಳಿದುಕೊಳ್ಳಲು ಸೋಂಕಿತ ವ್ಯಕ್ತಿಯ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಂಗ್’ಗೆ ರವಾನಿಸಲಾಗಿದೆ.
ಈ ನಡುವೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿರುವ ಸಚಿವ ಸುಧಾಕರ್ ಅವರು ಮಾತನಾಡಿ, ಚೀನಾದಿಂದ ಬಂದಿದ್ದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿದೆ. ಆದ್ರೆ ಆತನಿಗೆ ದೃಢಪಟ್ಟಿರುವ ಕೋವಿಡ್ ಯಾವ ತಳಿ ಎಂಬುದು ಇನ್ನೂ ಪತ್ತೆಯಾಗಿಲ್ಲ. ಕೊರೋನಾ ಪಾಸಿಟಿವ್ ಬಂದ ತಕ್ಷಣ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.





























































