ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಸೋಮವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ನಿವಾಸಕ್ಕೆ ಅನೇಕ ಮಂದಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಲ್ಲದೆ ಮನೆಗೆ ಕಲ್ಲು ತೂರಾಟ ನಡೆಸಿದ್ದಾರೆ.
ಒಳ ಮೀಸಲಾತಿ ಪ್ರಮಾಣ ಕಡಿಮೆ ಮಾಡಿರುವುದನ್ನು ಖಂಡಿಸಿ ಇಂದು ಶಿಕಾರಿಪುರದಲ್ಲಿ ಬಂಜಾರ, ಕೊರಚ, ಕೊರಮ, ಭೋವಿ ಸಮುದಾಯದವರು ತೀವ್ರ ಪ್ರತಿಭಟನೆ ನಡೆಸಿದರು.ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿದರು. ಪಟ್ಟಣದಲ್ಲಿ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿ ಬಿಜೆಪಿ ನಾಯಕರ ಫ್ಲೆಕ್ಸ್ ಗಳು, ಬ್ಯಾನರ್ ಗಳನ್ನು ಹರಿದು ಹಾಕಿದರು. ಟೈರ್, ಸೀರೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.



















