ಚಿಕ್ಕಮಗಳೂರು : ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ ಎಂದು ಸುದ್ದಿ ಹಬ್ಬಿಸಿದ್ದವರ ವಿರುದ್ಧ ದೂರು ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿಸಿದ್ದ ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲಿಂಗಾಯತರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದಿದ್ದಾರೆ ಎಂದು ನಕಲಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ದೂರು ನೀಡಿದ್ದಾರೆ. ಈ ಸಂಬಂಧ ದಾವಣಗೆರೆ ಮೂಲದ ಹರೀಶ್, ಗುರುಪಾಟೀಲ್ ಹಾಗೂ ತುಮಕೂರು ಮೂಲದ ಸುವರ್ಣಗಿರಿ ವಿರುದ್ಧ ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಮೂವರು ಕಾಂಗ್ರೆಸ್ನ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಅಂತ ಸಿಟಿ ರವಿ ಹೇಳಿಕೆ ನೀಡಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿತ್ತು. ಅಲ್ಲದೇ ಆ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧದ ಚರ್ಚೆಯಾಗಿತ್ತು. ಇದು ಬಿಜೆಪಿ ಆಂತರಿಕ ವಲಯದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಅಲ್ಲದೇ ವೀರಶೈವ ಲಿಂಗಾಯತ ಸಮುದಾಯ ಸಿಟಿ ರವಿ ವಿರುದ್ಧ ಸಿಡಿದೆದ್ದಿತ್ತು.
























