ಸಮಾಜದಲ್ಲಿ ಭೀತಿ ಹುಟ್ಟಿಸುವ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪ
ಬೆಂಗಳೂರು : ಬಿಜೆಪಿ ಸ್ಟಾರ್ ಪ್ರಚಾರಕರಾದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ದ್ವೇಷ ಭಾಷಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ರಾಜ್ಯದಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದ್ವೇಷಪೂರಿತ ಭಾಷಣ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇಂತಹ ಹೇಳಿಕೆಗಳ ಕುರಿತು ಸುಪ್ರೀಂಕೋರ್ಟ್ ನಿರ್ದೇಶನಗುಣವಾಗಿ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ದೂರಿನಲ್ಲಿ ಹೇಳಿದೆ.
ಅಜಯ್ ಮಾಕನ್, ವಿವೇಕ್ ಟಂಕಾ, ಸಲ್ಮಾನ್ ಖುರ್ಷಿದ್ ಮತ್ತು ಪವನ್ ಖೇರಾ ಅವರನ್ನೊಳಗೊಂಡ ಕಾಂಗ್ರೆಸ್ ನಾಯಕರ ನಿಯೋಗ ಚುನಾವಣಾ ಆಯೋಗವನ್ನು ಭೇಟಿ ಮಾಡಿ ಇಂತಹ ದ್ವೇಷಪೂರಿತ ಭಾಷಣಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ ಪತ್ರ ನೀಡಿತು.
ದ್ವೇಷಕಾರಿ ಭಾಷಣಗಳ ಕುರಿತು ಸುಪ್ರೀಂ ಕೋರ್ಟ್ ಆದೇಶದ ಪ್ರತಿಗಳನ್ನು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದು, ದೇಶದ ಕಾನೂನು ಮತ್ತು ಸುಪ್ರೀಂಕೋರ್ಟಿನ ತೀರ್ಪಿನ ಪ್ರಕಾರ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ ಎಂದು ಟಂಕಾ ಹೇಳಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಲಭೆಗಳು ನಡೆಯುತ್ತವೆ ಎಂದು ಬಿಜೆಪಿಯ ಮೂವರು ನಾಯಕರು ನೀಡುತ್ತಿರುವ ಹೇಳಿಕೆಗಳು ಸಮಾಜದಲ್ಲಿ ವಿಭಜನೆಗೆ ಕಾರಣವಾಗುತ್ತವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.





































