ಪೊಲೀಸ್ ಇಲಾಖೆಯಲ್ಲಿ ಕೇಸರೀಕರಣ ಮಾಡಿದರೆ ಸಹಿಸಲ್ಲ ಎಂಬ ವಾರ್ನಿಂಗ್
ಸೋಷಿಯಲ್ ಮೀಡಿಯಾ ಪೋಸ್ಟ್‌ಗಳಿಗೆ ಕಡಿವಾಣ ಹಾಕಲು ಸಲಹೆ
ಬೆಂಗಳೂರು: ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿ ನಡೆಯುವುದನ್ನು ಸಹಿಸುವುದಿಲ್ಲ. ಯಾರೇ ಕಾನೂನು ಕೈಗೆತ್ತಿಕೊಂಡರೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪೊಲೀಸರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನ ಬದಲಾವಣೆಯ ನಿರೀಕ್ಷೆಯೊಂದಿಗೆ ಹೊಸ ಸರ್ಕಾರವನ್ನು ಚುನಾಯಿಸಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಬೆಂಗಳೂರು ನಗರದ ಸಂಚಾರ ಸಮಸ್ಯೆ ನಿವಾರಣೆ ಹಾಗೂ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯ ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಮಾದಕ ವಸ್ತುಗಳ ಹಾವಳಿಯನ್ನು ತಡೆಗಟ್ಟಬೇಕು. ಹೊಯ್ಸಳ ಗಸ್ತುವಾಹನ ಸದಾ ಜಾಗೃತವಾಗಿರುವ ಮೂಲಕ ಅಪರಾಧಗಳನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.
ಪೊಲೀಸ್ ಠಾಣೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು. ಪೊಲೀಸ್ ಠಾಣೆಗೆ ಸಮಸ್ಯೆ ಪರಿಹಾರಕ್ಕಾಗಿ ಬರುವ ಸಾರ್ವಜನಿಕರನ್ನು ಅಪರಾಧಿಗಳಂತೆ ಕಾಣದೆ ಸೌಜನ್ಯದಿಂದ ವರ್ತಿಸಬೇಕು. ಅವರ ಸಮಸ್ಯೆಗಳನ್ನು ಬಗೆಹರಿಸಿ ನ್ಯಾಯ ಒದಗಿಸಬೇಕು, ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುವ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸ್ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಗೂಂಡಾಗಿರಿ, ಅನಧಿಕೃತ ಕ್ಲಬ್‌ಗಳ ಚಟುವಟಿಕೆಗಳು, ಡ್ರಗ್ ಮಾಫಿಯಾವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇವುಗಳಿಗೆ ಅವಕಾಶ ನೀಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.































































