ನಿಯಮ ಉಲ್ಲಂಘಿಸಿದರೆ ಕಠಿಣ ದಂಡ, ಡೀಸೆಲ್ ಸಹಾಯಧನ ರದ್ದು
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಜೂ.1ರಿಂದ ಎರಡು ತಿಂಗಳು ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಜಾರಿಗೆ ಬರಲಿದೆ. ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರು ಅಳವಡಿಸಿದ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆ ಜೂ. 1ರಿಂದ ಜುಲೈ 31ರವರೆಗೆ 61 ದಿನ ಸ್ಥಗಿತವಾಗಲಿದೆ.
ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಎಂಜಿನ್ ಹಾಗೂ ಸಾಂಪ್ರದಾಯಿಕ ಮತ್ತು ನಾಡದೋಣಿಗಳಲ್ಲಿ ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿ ನೀಡಲಾಗಿದೆ.
ಮೀನುಗಾರಿಕೆ ನಿಷೇಧ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲ ಮೀನುಗಾರರು ಈ ಆದೇಶವನ್ನು ಪಾಲಿಸಿ ಸರಕಾರದೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






























































