5 ಸಾವಿರ ರೂ. ಖರೀದಿಯ ಕೂಪನ್‌ಗಳನ್ನು 50 ಕ್ಷೇತ್ರಗಳಲ್ಲಿ ಹಂಚಿದೆ ಎಂಬ ಆರೋಪ
ಬೆಂಗಳೂರು: ಸುಳ್ಳು ಗ್ಯಾರಂಟಿಗಳ ಜತೆಗೆ ಕೂಪನ್‌ಗಳನ್ನು ಹಂಚಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದಲ್ಲಿ 45 ರಿಂದ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಅಕ್ರಮವಾಗಿ ಗೆದ್ದಿದೆ ಎಂದು ಜೆಡಿಎಸ್ ವರಿಷ್ಠ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿ ಮಿಸ್ಟರ್ ಸಿದ್ದರಾಮಯ್ಯ ಧೈರ್ಯ ಇದ್ದರೆ ಈ ಅಕ್ರಮವನ್ನು ತನಿಖೆಗೆ ಒಳಪಡಿಸಿ ಎಂದು ಸವಾಲೆಸೆದಿದ್ದಾರೆ.
ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೋಡ್ ಉಳ್ಳ ಕೂಪನ್ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ ಎಂದು ದೂರಿದರು.
ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್ ಹೊಂದಿರುವ ಕೂಪನ್‌ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು. ಈ ಕೂಪನ್‌ಗಳಿಂದಲೇ ನಾವು ಸೋಲಬೇಕಾಯಿತು. ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕೂಪನ್‌ಗಳನ್ನು ಹಂಚಲು ಕಾಂಗ್ರೆಸ್ ಅಭ್ಯರ್ಥಿಗಳು ಹಣ ಎಲ್ಲಿಂದ ತಂದರು? ಕಾಂಗ್ರೆಸ್ ಅಭ್ಯರ್ಥಿ ಗೆದ್ದರಷ್ಟೇ ಈ ಕೂಪನ್ ನಗದಾಗುತ್ತದೆ. ಆಗ ಕೂಪನ್ ಹೊಂದಿರುವವರು ನಿಗದಿತ ಮಾಲ್ ಅಥವಾ ಅಂಗಡಿಗೆ ಹೋಗಿ ಕೂಪನ್‌ನಲ್ಲಿ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಆಮಿಷ ಒಡ್ಡಲಾಗಿದೆ. ಇದು ಚುನಾವಣೆಯ ಮಹಾ ಅಕ್ರಮ. ಈ ಚುನಾವಣೆ ಆಯೋಗ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ರಾಮನಗರ, ಮಾಗಡಿ, ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ 42ರಿಂದ 50 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈ ರೀತಿಯ ಅಕ್ರಮ ಮಾಡಿದೆ. ಬಿಜೆಪಿ ಸರಕಾರದ ಅಕ್ರಮಗಳನ್ನು ತನಿಖೆ ಮಾಡಿಸುವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಈ ಕೂಪನ್ ಅಕ್ರಮದ ಬಗ್ಗೆ ತನಿಖೆ ಮಾಡಿಸಬೇಕು ಎಂದಿದ್ದಾರೆ.
ಒಂದೊಂದು ಕ್ಷೇತ್ರದಲ್ಲಿ ಸುಮಾರು 60 ಸಾವಿರ ಕೂಪನ್ ಹಂಚಿದ್ದಾರೆ ಎಂದು ಹೇಳಿದ ಕುಮಾಸ್ವಾಮಿ ಮಾಧ್ಯಮಗೋಷ್ಠಿಯಲ್ಲಿ ಗಿಫ್ಟ್ ಕೂಪನ್‌ಗಳನ್ನು ತೋರಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಗೆಲವು ಗೆಲುವೇ. ಆದರೆ, ಮಹಾತ್ಮ ಗಾಂಧೀಜಿ ಹೆಸರು ಹೇಳುವ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಅತ್ಯಂತ ಕೀಳು ಕೆಲಸ ಮಾಡಿದೆ. ಆ ಪಕ್ಷಕ್ಕೆ ನೈತಿಕತೆ ಎನ್ನುವುದು ಇದೆಯಾ ಎಂದು ಅವರು ಪ್ರಶ್ನೆ ಮಾಡಿದರು.
ನಮ್ಮ ಬಗ್ಗೆ ಕಾಂಗ್ರೆಸ್ ಒಂದು ಟ್ವೀಟ್ ಮಾಡಿದೆ. ಗ್ಯಾರಂಟಿ ಕಾರ್ಯಕ್ರಮಗಳನ್ನು ಈಡೇರಿಸುವುದು ಇರಲಿ, ನೀವು ಪಕ್ಷ ವಿಸರ್ಜನೆ ಯಾವಾಗ ಮಾಡ್ತೀರಾ ಅಂತಾ ಕೇಳಿದೆ. ಹಿಂದೆ ಒಂದು ಚುನಾವಣೆಯಲ್ಲಿ 179 ಸ್ಥಾನದಿಂದ 39 ಸ್ಥಾನಕ್ಕೆ ಇಳಿದಾಗ ಕಾಂಗ್ರೆಸ್ ನಾಯಕರು ಪಕ್ಷ ವಿಸರ್ಜನೆ ಮಾಡಿದ್ದರಾ? ಕಾಲಚಕ್ರ ತಿರುಗುತ್ತೆ, ಮೇಲೆ ಇದ್ದವನು ಕೆಳಗೆ ಇಳಿಬೇಕು, ಕೆಳಗಿದ್ದವನು ಮೇಲೆ ಬರಬೇಕು. ಈ ದುರಹಂಕಾರದ ಮಾತು ಬೇಡ. ಪಕ್ಷ ವಿಸರ್ಜನೆ ಮಾಡುವುದು, ಅಂತ್ಯಸಂಸ್ಕಾರ ಮಾಡುವುದು ಇದೆಲ್ಲ ನಾನು ನಿಮ್ಮಿಂದ ಕಲೀಬೇಕಿಲ್ಲ ಎಂದು ಅವರು ಕಿಡಿಕಾರಿದರು.
ನನಗೆ 123 ಸೀಟು ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದೆ. ಆ ಹೇಳಿಕೆ ಕಾಂಗ್ರೆಸ್ ನಾಯಕರಿಗೆ ಬೇರೆ ರೀತಿ ಕೇಳಿಸಿದೆ. ಒಮ್ಮೆ ಅವರು ನನ್ನ ಹೇಳಿಕೆಯನ್ನು ಮತ್ತೆ ಕೇಳಿಸಿಕೊಳ್ಳಲಿ. ನಾನು ಹೇಳಿದ್ದು ಏನು ಎಂಬುದು ಅರ್ಥ ಆಗುತ್ತದೆ. ಅವರಂಥ ಕುತಂತ್ರದ ರಾಜಕಾರಣ ಮಾಡಿ, ನಾವು ಪಕ್ಷ ಕಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.