ಒಡಿಶಾ : ಈ ದುರಂತ ಒಂದು ನೋವಿನ ಘಟನೆ. ಗಾಯಾಳುಗಳ ಚಿಕಿತ್ಸೆಗೆ ಸರ್ಕಾರ ಎಲ್ಲ ರೀತಿಯ ಸಹಾಯ ನೀಡುತ್ತದೆ. ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆ ನೀಡಲಾಗಿದೆ. ತಪ್ಪಿತಸ್ಥರೆಂದು ಕಂಡುಬಂದವರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ರೈಲ್ವೆ ಇಲಾಖೆ ಹಳಿಗಳ ಪುನಶ್ಚೇತನಕ್ಕೆ ಶ್ರಮಿಸುತ್ತಿದೆ. ಗಾಯಗೊಂಡ ಸಂತ್ರಸ್ತರನ್ನು ಭೇಟಿ ಮಾಡಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಶನಿವಾರ ಸಂಜೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ನಡೆಸಿದ್ದಾರೆ.
ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಬಹನಾಗಾದಲ್ಲಿ ಬಂದಿಳಿದ ಮೋದಿ, ದುರಂತ ಸ್ಥಳವನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಸ್ಥಳದಲ್ಲಿದ್ದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದ ಕುರಿತು ಪ್ರಧಾನಿಗೆ ಮಾಹಿತಿ ನೀಡಿದರು. ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಉಪಸ್ಥಿತರಿದ್ದರು.
ಬಹನಾಗ ರೈಲು ನಿಲ್ದಾಣದ ಬಳಿ 3 ರೈಲುಗಳ ನಡುವೆ ಡಿಕ್ಕಿ ಪ್ರಕರಣದ ಬಗ್ಗೆ ಮಾತನಾಡಿದ ಮೋದಿ, ನೊಂದ ಕುಟುಂಬಗಳ ಜೊತೆ ಕೇಂದ್ರ ಸರಕಾರ ಇದೆ. ರೈಲು ದುರಂತವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ದುರಂತಕ್ಕೆ ಕಾರಣರಾದವರನ್ನು ಶಿಕ್ಷೆಗೆ ಒಳಪಡಿಸುತ್ತೇವೆ. ದುರಂತ ಪಾಠ ಕಲಿಸಿದೆ, ಮುಂದೆ ಹೀಗೆ ಆಗದಂತೆ ಎಚ್ಚರಿಕೆ ವಹಿಸುತ್ತೇವೆ. ಮೃತರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಗಾಯಾಳುಗಳು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಬಾಲಸೋರ್ ಆಸ್ಪತ್ರೆಗೆ ಭೇಟಿ ಬಳಿಕ ಪ್ರಧಾನಿ ಮೋದಿ ಹೇಳಿದ್ದಾರೆ. ಸಂಪುಟ ಕಾರ್ಯದರ್ಶಿ ಮತ್ತು ಆರೋಗ್ಯ ಸಚಿವರೊಂದಿಗೆ ಮಾತನಾಡಿದ ಮೋದಿ ಗಾಯಾಳುಗಳಿಗೆ ಮತ್ತು ಅವರ ಕುಟುಂಬಗಳಿಗೆ ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಹೇಳಿದ್ದಾರೆ.
































