ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದರು.
ಮಂಗಳವಾರ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಮಂಗಳೂರಿನಲ್ಲಿ ಎದುರಿಸುತ್ತಿರುವ ಸವಾಲು ಮತ್ತು ಸಮಸ್ಯೆಗಳನ್ನು ಪರಿಶೀಲಿಸಿದ್ದೇನೆ. ಹೊಸ ಸವಾಲುಗಳೂ ಇಲ್ಲಿ ಹುಟ್ಟಿಕೊಂಡಿವೆ. ಪೊಲೀಸ್ ಇಲಾಖೆಗೂ ಹೊಸ ಸವಾಲುಗಳು ಎದುರಾಗಿವೆ ಎಂದರು. ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್ಗಿರಿ ತುಂಬಾ ನಡೆಯುತ್ತಿದೆ. ಇದನ್ನು ತಡೆಯದಿದ್ದರೆ ಇಲಾಖೆ ಮತ್ತು ರಾಜ್ಯಕ್ಕೆ ಕೆಟ್ಟ ಹೆಸರು. ನೈತಿಕ ಪೊಲೀಸ್ಗಿರಿ ತಡೆಯಲು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಮರ್ಥ ಅಧಿಕಾರಿಗಳ ಆ್ಯಂಟಿ ಕಮ್ಯುನಲ್ ವಿಂಗ್ ಘಟಕ ಸ್ಥಾಪಿಸುತ್ತೇವೆ ಎಂದರು. ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ಡಾ. ಚಂದ್ರಗುಪ್ತ, ಆಯುಕ್ತ ಕುಲದೀಪ್ ಕುಮಾರ್ ಜೈನ್, ದಕ್ಷಿಣ ಕನ್ನಡ ಎಸ್ಪಿ ಸಿ.ಬಿ. ರಿಷ್ಯಂತ್, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್, ಉಡುಪಿ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಮತ್ತು ಚಿಕ್ಕಮಗಳೂರು ಎಸ್ಪಿ ಉಮಾಪ್ರಶಾಂತ್ ಉಪಸ್ಥಿತರಿದ್ದರು.
ವಿಎಚ್‌ಪಿ ಸ್ವಾಗತ
ನೈತಿಕ ಪೊಲೀಸ್ ಗಿರಿ ತಡೆಗಾಗಿ ಆ್ಯಂಟಿ ಕಮ್ಯುನಲ್ ವಿಂಗ್ ರಚಿಸುವುದಾಗಿ ಗೃಹಸಚಿವರು ನೀಡಿರುವ ಹೇಳಿಕೆಯನ್ನು ವಿಎಚ್‌ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಸ್ವಾಗತಿಸಿದ್ದಾರೆ. ಇಸ್ಲಾಮಿಕ್ ಜಿಹಾದಿಗಳಿಂದ ಹಿಂದೂ ಸಮಾಜದ ಮೇಲಾಗುತ್ತಿರುವ ದಬ್ಬಾಳಿಕೆ ಕಡಿಮೆಯಾಗಲಿ ಎಂದು ತಿಳಿಸಿದ್ದಾರೆ.































