ಮಂಗಳೂರು : ಹವಾಮಾನ ಮುನ್ಸೂಚನೆಯಂತೆ ಜೂ. 6ರಿಂದ 11ರವರೆಗೆ ಬಿಪೊರ್ ಜಾಯ್ ಚಂಡಮಾರುತದಿಂದಾಗಿ ಅರಬ್ಬಿ ಸಮುದ್ರವು ಪ್ರಕ್ಷುಬ್ಧಗೊಂಡಿದ್ದು, ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು ಕೂಡಲೇ ದಡ ಸೇರುವಂತೆ ಸೂಚಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ ಹಾಗೂ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತರ್ತು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು ಅದರಂತೆ, ಜೂ. 11 ರವರೆಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರಿಗೆ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಮನ್ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು. ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವಂತೆ ಮನ್ಸೂಚನೆ ನೀಡಲಾಗಿದೆ.


































































