ಬಾಬುರಾವ್ ಚಿಂಚನ್‌ಸೂರ್, ಆರ್.ಶಂಕರ್, ಲಕ್ಷ್ಮಣ ಸವದಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನ
ಬೆಂಗಳೂರು : ಬಾಬುರಾವ್ ಚಿಂಚನ್‌ಸೂರ್, ಆರ್.ಶಂಕರ್ ಮತ್ತು ಲಕ್ಷ್ಮಣ ಸವದಿ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್‌ನ ಮೂರು ಸ್ಥಾನಗಳಿಗೆ ಜೂನ್ 30ರಂದು ಉಪಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ವಿಧಾನ ಪರಿಷತ್‌ನ ಮೂವರು ಸದಸ್ಯರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾದ ಮೂರು ಸ್ಥಾನಗಳಿಗೆ ಜೂನ್ 30ರಂದು ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಮಂಗಳವಾರ ಘೋಷಿಸಿದೆ.
ಚುನಾವಣಾ ಅಧಿಸೂಚನೆ ಜೂನ್ 13ರಂದು ಪ್ರಕಟವಾಗಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಶುರುವಾಗಲಿದ್ದು, ಜೂನ್ 20ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೇ ದಿನ. ಜೂನ್ 21ರಂದು ನಾಮಪತ್ರ ಪರಿಶೀಲನೆ, ಜೂನ್ 23ಕ್ಕೆ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿರಲಿದೆ. ಜೂನ್ 30ಕ್ಕೆ ಮತದಾನ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ತನಕ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ನಡೆದು ಫಲಿತಾಂಶ ಘೋಷಣೆ ಆಗಲಿದೆ. ವಿಧಾನ ಪರಿಷತ್‌ನ ಸದಸ್ಯರನ್ನು ಆಯ್ಕೆ ಮಾಡುವ ಈ ಮತದಾನಕ್ಕೆ ವಿಧಾನಸಭೆಯ ಸದಸ್ಯರೇ ಮತದಾರರು. ವಿಧಾನ ಸೌಧದಲ್ಲೇ ಮತದಾನ ನಡೆಯಲಿದೆ. ಕಾಂಗ್ರೆಸ್ 136 ಶಾಸಕರನು ಹೊಂದಿರುವುದರಿಂದ ಪಕ್ಷದ ಅಭ್ಯರ್ಥಿಗಳೇ ಗೆಲ್ಲುವ ನಿರೀಕ್ಷೆಯಿದೆ. ಈ ಮೂಲಕ ಮೇಲ್ಮನೆಯಲ್ಲೂ ಕಾಂಗ್ರೆಸ್ ಬಹುಮತ ಪಡೆಯಲಿದೆ.






























































