ನಕಲಿ ಪೋಸ್ಟ್‌ ಪ್ರಕರಣ : ಫೇಸ್‌ಬುಕ್‌ ಬಂದ್‌ ಮಾಡುವ ಎಚ್ಚರಿಕೆ

ಮಂಗಳೂರಿನ ವ್ಯಕ್ತಿಯ ಹೆಸರಿನಲ್ಲಿ ನಕಲಿ ಖಾತೆ ತೆರೆದು ಪೋಸ್ಟ್‌

ಸೌದಿ ಜೈಲಿನಲ್ಲಿ ಕೊಳೆಯುತ್ತಿರುವ ಅಮಾಯಕ ವ್ಯಕ್ತಿ

ಬೆಂಗಳೂರು : ಪೊಲೀಸರಿಗೆ ಸರಿಯಾದ ಮಾಹಿತಿ ನೀಡದಿದ್ದರೆ ಭಾರತದಲ್ಲಿ ಫೇಸ್‌ಬುಕ್ ಬಂದ್ ಮಾಡಿಸಬೇಕಾಗುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಸೌದಿಯಲ್ಲಿ ಉದ್ಯೋಗದಲ್ಲಿರುವ ಮಂಗಳೂರಿನ ವ್ಯಕ್ತಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಪೋಸ್ಟ್‌ಗಳನ್ನು ಹಾಕಿದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಈ ಎಚ್ಚರಿಕೆ ನೀಡಿದೆ.
ಫೇಸ್‌ಬುಕ್ ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಮಂಗಳೂರು ಪೊಲೀಸರು ಅರ್ಜಿ ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದರು. ಪ್ರಕರಣದ ಕುರಿತು ಸರಿಯಾದ ಮಾಹಿತಿಯನ್ನು ಒಂದು ವಾರದಲ್ಲಿ ಒದಗಿಸುವಂತೆ ಹೈಕೋರ್ಟ್‌ ಕೇಂದ್ರ ಸರ್ಕಾರ ಮತ್ತು ಮಂಗಳೂರು ಪೊಲೀಸರಿಗೆ ಸೂಚನೆ ನೀಡಿ ಅರ್ಜಿಯ ವಿಚಾರಣೆಯನ್ನು ಜೂನ್‌ 22ಕ್ಕೆ ಮುಂದೂಡಿದೆ.
ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪದಲ್ಲಿ ಮಂಗಳೂರಿನ ಬಿಕರ್ನಕಟ್ಟೆಯ ಶೈಲೇಶ್‌ ಎಂಬವರನ್ನು ಸೌದಿ ಪೊಲೀಸರು ಬಂಧಿಸಿದ್ದು, ಅವರು ಮೂರು ವರ್ಷದಿಂದ ಅಲ್ಲಿನ ಜೈಲಿನಲ್ಲಿದ್ದಾರೆ. ಅವರ ಹೆಂಡತಿ ಮಂಗಳೂರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಕುರಿತು ದೂರು ನೀಡಿದ್ದು, ಈ ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ.
ಸಿಎಎ ಮತ್ತು ಎನ್‌ಆರ್‌ಸಿ ವಿವಾದ ತಾರಕಕ್ಕೇರಿದ ಸಂದರ್ಭದಲ್ಲಿ ಅದನ್ನು ಬೆಂಬಲಿಸಿ ಶೈಲೇಶ್‌ ಹೆಸರಿನ ಫೇಸ್‌ಬುಕ್‌ ಖಾತೆಯಿಂದ 2019ರಲ್ಲಿ ಪೋಸ್ಟ್‌ ಹಾಕಲಾಗಿತ್ತು. ಆಗ ಅವರಿಗೆ ಬೆದರಿಕೆ ಕರೆಗಳು ಬಂದಿದ್ದವು. ಇದರಿಂದಾಗಿ ಅವರು ತಮ್ಮ ಫೇಸ್‌ಬುಕ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದರು. 2020ರಲ್ಲಿ ಕಿಡಿಗೇಡಿಗಳು ಮತ್ತೆ ಶೈಲೇಶ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಸೌದಿ ದೊರೆ ವಿರುದ್ಧ ಪೋಸ್ಟ್‌ ಹಾಕಿದ್ದರು. ಆಗ ಅವರು ಸೌದಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಅವರನ್ನು ಅಲ್ಲಿನ ದೇಶದ ಕಾನೂನಿನ ಅನ್ವಯ ಬಂಧಿಸಲಾಗಿತ್ತು. ಗಂಡನನ್ನು ಬಿಡುಗಡೆ ಮಾಡುವಂತೆ ಕೋರಿ ಶೈಲೇಶ್ ಪತ್ನಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು. ಶೈಲೇಶ್ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತರೆಯಲಾಗಿದೆ ಎಂದು ಮಂಗಳೂರು ಪೊಲೀಸರಿಗೆ ಸಹ ಅವರು ದೂರು ನೀಡಿದ್ದರು. ಆದರೆ ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿಯ ವಿಚಾರಣೆ ವೇಳೆ ಮಂಗಳೂರು ಪೊಲೀಸರು ಫೇಸ್‌ಬುಕ್‌ನಿಂದ ಸರಿಯಾದ ಮಾಹಿತಿ ಸಿಗುತ್ತಿಲ್ಲ ಎಂದು ಕೋರ್ಟ್‌ಗೆ ಹೇಳಿಕೆ ನೀಡಿದ್ದರು. ಆದ್ದರಿಂದ ಕೋರ್ಟ್‌ ಫೇಸ್‌ಬುಕ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಮೌಖಿಕ ಎಚ್ಚರಿಕೆಯನ್ನು ಕೊಟ್ಟಿದೆ.
ಸೌದಿ ದೊರೆ ವಿರುದ್ಧ ಪೋಸ್ಟ್‌ ಹಾಕಿ ಅಪರಾಧಕ್ಕಾಗಿ ಅವರಿಗೆ 15 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಮೂರು ವರ್ಷಗಳಿಂದ ಅವರು ಜೈಲುವಾಸ ಅನುಭವಿಸುತ್ತಿದ್ದಾರೆ. ಘಟನೆ ಕುರಿತು ಸೂಕ್ತ ಮಾಹಿತಿಯನ್ನು ಫೇಸ್‌ಬುಕ್ ನೀಡಬೇಕು. ಸುಳ್ಳು ಪ್ರಕರಣದಲ್ಲಿ ಜೈಲಿನಲ್ಲಿರುವ ವ್ಯಕ್ತಿಯ ಬಿಡುಗಡೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ವರದಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿ, ವಿಚಾರಣೆ ಮುಂದೂಡಿಕೆ ಮಾಡಿದೆ. ಮಂಗಳೂರಿನ ಶೈಲೇಶ್ 25 ವರ್ಷಗಳಿಂದ ಸೌದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಪತ್ನಿ ಮತ್ತು ಮಕ್ಕಳು ಮಂಗಳೂರಿನಲ್ಲಿದ್ದಾರೆ.

















































error: Content is protected !!
Scroll to Top