ಮಾನಹಾನಿ ಜಾಹೀರಾತು : ಸಿದ್ದರಾಮಯ್ಯ, ಡಿಕೆಶಿ, ರಾಹುಲ್‌ ಗಾಂಧಿಗೆ ಸಮನ್ಸ್‌

ಪತ್ರಿಕೆಗಳಲ್ಲಿ ನೀಡಿದ ಜಾಹೀರಾತು ವಿರುದ್ಧ ಬಿಜೆಪಿ ದಾಖಲಿಸಿದ ದೂರು

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಭ್ರಷ್ಟಾಚಾರದ ಕುರಿತು ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಮಾನಹಾನಿ ಮಾಡಿದ ಕುರಿತಂತೆ ಕಾಂಗ್ರೆಸ್‌ ವಿರುದ್ಧ ಬಿಜೆಪಿ ದಾಖಲಿಸಿದ್ದ ದೂರಿಗೆ ಸಂಬಂಧಿಸಿ ನ್ಯಾಯಾಲಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಸಮನ್ಸ್‌ ಜಾರಿ ಮಾಡಿದೆ.
ಬೆಂಗಳೂರಿನ ಚೀಫ್‌ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮನ್ಸ್ ಜಾರಿಗೊಳಿಸಿದ್ದು, ಜುಲೈ 27ರಂದು ಪ್ರಕರಣದ ವಿಚಾರಣೆ ನಡೆಯಲಿದೆ.
ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ನೀಡಿರುವ ಜಾಹೀರಾತಿನಲ್ಲಿ ಬಿಜೆಪಿ ಸರಕಾರದ ವಿರುದ್ಧ ಶೇ.40 ಭ್ರಷ್ಟಾಚಾರ ಆರೋಪ ಹೊರಿಸಲಾಗಿದೆ. 2023ರ ಮೇ 5ರ ಪತ್ರಿಕೆಗಳಲ್ಲಿ ಮುದ್ರಿತವಾಗಿರುವ ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರ ಹಿಂದಿನ 4 ವರ್ಷಗಳಲ್ಲಿ 1.5 ಲಕ್ಷ ಕೋಟಿ ರೂಪಾಯಿ ಲೂಟಿ ಮಾಡಿದೆ ಎಂದು ಆರೋಪಿಸಲಾಗಿತ್ತು. ಇದರ ವಿರುದ್ಧ ಮೇ 9ರಂದು ಬಿಜೆಪಿಯ ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್‌ ದೂರು ದಾಖಲಿಸಿದ್ದರು.
ಜಾಹೀರಾತಿನಲ್ಲಿ ಮಾಡಿದ ಆರೋಪಗಳು ಆಧಾರ ರಹಿತವಾದುದು ಮತ್ತು ಮಾನಹಾನಿ ಉಂಟು ಮಾಡುವಂಥದ್ದು ಎಂದು ದೂರಿನಲ್ಲಿ ಹೇಳಲಾಗಿದೆ. ಇಂತಹ ಪ್ರಚಾರ ಅಭಿಯಾನಗಳ ಕಾರಣದಿಂದ ಬಿಜೆಪಿಯು ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿದೆ ಎಂದು ಆರೋಪಿಸಲಾಗಿದೆ.

















































error: Content is protected !!
Scroll to Top