ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಸಲು ಸಮಸ್ಯೆ
ಬೆಂಗಳೂರು: ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ ಕಾಂಗ್ರೆಸ್‌ನ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ತಡೆ ಬಿದ್ದಿದೆ. ಯೋಜನೆಯನ್ನು ಸದ್ಯತಡೆ ಹಿಡಿಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿಗಳ ಜತೆ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ. ಗೃಹಜ್ಯೋತಿ ಯೋಜನೆ ಅರ್ಜಿ ವಿಚಾರವಾಗಿ ಸರ್ವರ್ ಸಮಸ್ಯೆ ನೋಡುತ್ತಿದ್ದೀರಿ. ಗೃಹಲಕ್ಷ್ಮಿ ಯೋಜನೆಯಲ್ಲಿ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಆನ್‌ಲೈನ್ ಹಾಗೂ ಆಫ್‌ಲೈನ್ ವ್ಯವಸ್ಥೆ ಕಲ್ಪಿಸಲಾಗುವುದು. ಈ ವಿಚಾರವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಅಧಿಕಾರಿಗಳ ಜತೆ ಸಭೆ ನಡೆಸಲಿದ್ದಾರೆ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂ. ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ, ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಯೋಜನೆಗಳಿಗೆ ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿ ಎಂದು ತಿಳಿಸಿದರು.






























































