ರಾತ್ರಿ ಗಸ್ತು ವ್ಯವಸ್ಥೆ, ಚೆಕ್‌ಪೋಸ್ಟ್ ತಪಾಸಣೆ ಹೆಚ್ಚಿಸಲು ಎಸ್‌ಪಿಗೆ ಪತ್ರ
ಉಡುಪಿ : ಜಿಲ್ಲೆಯಲ್ಲಿ ಮತ್ತೆ ಗೋ ಕಳ್ಳತನ ಮತ್ತು ಅಕ್ರಮ ಜಾನುವಾರು ಸಾಗಾಟ ಪ್ರಕರಣಗಳು ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆ ಎಂದಿರುವ ಉಡುಪಿ ಶಾಸಕ ಯಶ್‌ಪಾಲ್ ಸುವಣ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರನ್ನು ಆಗ್ರಹಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಬರೆದಿರುವ ಪತ್ರದಲ್ಲಿ ಗೋ ಕಳ್ಳತನ ಹಾಗೂ ಅಮಾನುಷವಾಗಿ ಅಕ್ರಮ ಗೋ ಸಾಗಾಟದ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ದೂರು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಹಿಂಪಡೆಯುವ ಬಗ್ಗೆ ಚರ್ಚೆ ಆರಂಭವಾದ ದಿನದಿಂದ ಇಂತಹ ಘಟನೆಗಳು ಹೆಚ್ಚಾಗಿರುವ ಬಗ್ಗೆ ಗ್ರಾಮೀಣ ಭಾಗದ ರೈತಾಪಿ ವರ್ಗ ಹಾಗೂ ಹೈನುಗಾರಿಕೆಯನ್ನು ಅವಲಂಬಿಸಿರುವ ಬಡ ಕೃಷಿಕರು ಚಿಂತೆಗೀಡಾಗಿದ್ದು ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ. ಪೋಲಿಸ್ ಇಲಾಖೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತುರ್ತು ನೆಲೆಯಲ್ಲಿ ಗೋವುಗಳ ಕಳ್ಳತನ ಹಾಗೂ ಅಕ್ರಮ ಗೋ ಸಾಗಾಟವನ್ನು ತಡೆಯಲು ಸೂಕ್ಷ್ಮ ಪ್ರದೇಶದಲ್ಲಿ ರಾತ್ರಿ ಗಸ್ತು ವ್ಯವಸ್ಥೆ, ಚೆಕ್‌ಪೋಸ್ಟ್ ಮೂಲಕ ವಾಹನ ತಪಾಸಣೆ ಹಾಗೂ ಇಂತಹ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಸಂಭಾವ್ಯ ವ್ಯಕ್ತಿಗಳ ಮೇಲೆ ನಿಗಾ ವಹಿಸುವಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ನಿರ್ದೇಶನ ನೀಡುವಂತೆ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರದಲ್ಲಿ ತಿಳಿಸಿದ್ದಾರೆ.






























































