ಕಾರ್ಕಳ : ವಿದ್ಯಾರ್ಥಿಗಳಿಗೆ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕಾರ್ಕಳ ತಾಲೂಕು ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಜೂ. 28 ರಂದು ಮನವಿ ಸಲ್ಲಿಸಲಾಯಿತು
ರಾಜ್ಯದಲ್ಲಿ ನೂತನ ಸರಕಾರ ಶಕ್ತಿ ಯೋಜನೆಯಡಿಯಲ್ಲಿ ಸರಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂದು ಘೋಷಿಸಿರುವುದರಿಂದ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಶಾಲಾ -ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಇದಲ್ಲದೆ, ಹಳ್ಳಿಗಳಲ್ಲಿ ಸಮಪರ್ಕ ಬಸ್ ವ್ಯವಸ್ಥೆ ಇಲ್ಲದೆ ಇರುವುದರಿಂದ ಕೆಲವು ವಿದ್ಯಾರ್ಥಿಗಳು ನಡೆದುಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಪರಿಣಾಮವಾಗಿ ಸಮಯಕ್ಕೆ ಸರಿಯಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಶಾಲಾ – ಕಾಲೇಜಿಗೆ ತೆರಳುವ ಮತ್ತು ಹಿಂತಿರುಗುವ ಸಮಯದಲ್ಲಿ ಬಸ್‌ಗಳ ಸಂಖ್ಯೆ ಹೆಚ್ಚಿಸಬೇಕು. ಅಲ್ಲದೆ, ವಿದ್ಯಾರ್ಥಿಗಳಿಗೆ ಪ್ರತ್ಯೆಕ ಬಸ್‌ನ ವ್ಯವಸ್ಥೆ ಕಲ್ಪಿಸಬೇಕು ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಒದಗಿಸಿದಂತೆ ವಿದ್ಯಾರ್ಥಿಗಳಿಗೂ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.
ಈ ಸಂದರ್ಭ ಎಬಿವಿಪಿಯ ನಗರ ಸಹ ಕಾರ್ಯದರ್ಶಿ ಶ್ರೇಯಸ್ ಅಂಚನ್, ಸಹ ಹೋರಾಟ ಪ್ರಮುಖ್ ಪವನ್ ಕುಲಾಲ್, ಅಧ್ಯಯನ ಪ್ರಮುಖ್ ವಿನೀತ್ ರಾವ್, ಕಾರ್ಯಕರ್ತರಾದ ಕಾರ್ತಿಕ್ ಕೆ., ಪ್ರಜ್ವಲ್ ರಾವ್ ಮತ್ತು ಶ್ರೇಯಸ್ ಪೂಜಾರಿ ಉಪಸ್ಥಿತರಿದ್ದರು.







































