ಮಹಿಳೆಯರಿಗೆ ಉಪಯುಕ್ತವಾದ ಯೋಜನೆ, ಭಕ್ತರ ಸಂಖ್ಯೆ ಹೆಚ್ಚಳ ಎಂದು ಪ್ರಶಂಸೆ
ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಸಿರುವ ಶಕ್ತಿ ಗ್ಯಾರಂಟಿಗೆ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಈ ಪತ್ರವನ್ನು ಸಿದ್ದರಾಮಯ್ಯ ತನ್ನ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡು ನನ್ನ 14ನೇ ಬಜೆಟ್‌ನ ಫಲಶ್ರುತಿಯನ್ನು ಶ್ಲಾಘಿಸಿ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ವ್ಯಕ್ತಪಡಿಸಿ ಡಿ. ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.
‘ಶಕ್ತಿ ಯೋಜನೆ’ ಯಿಂದ ಧರ್ಮಸ್ಥಳಕ್ಕೆ ಬರುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಮಂಜುನಾಥ ಸ್ವಾಮಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅವಕಾಶ ಇದ್ದಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಆಹ್ವಾನ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಮೂಲಕ ಉಪಯುಕ್ತ ಕಾರ್ಯಕ್ರಮಗಳನ್ನು ನೀಡುತ್ತಿದ್ದೀರ. ಧರ್ಮಸ್ಥಳಕ್ಕೆ ಬರುತ್ತಿರುವ ಮಹಿಳಾ ಭಕ್ತರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀಮಂಜುನಾಥ್ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ. ಬಜೆಟ್‌ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಧನ್ಯವಾದ ಎಂದು ಪತ್ರದಲ್ಲಿ ಬರೆದಿದ್ದಾರೆ.

























