ಸಿದ್ದರಾಮಯ್ಯ ವಿರುದ್ಧ ಮತ್ತೆ ಕಿಡಿ ಕಾರಿದ ಹರಿಪ್ರಸಾದ್‌

ಕಾರ್ಕಳ ಕೋಟಿ-ಚೆನ್ನಯ ಥೀಮ್‌ ಪಾರ್ಕ್‌ಗೆ 5 ಕೋಟಿ ಕೊಟ್ಟಿಲ್ಲ ಎಂದು ಆಕ್ರೋಶ

ಬೆಂಗಳೂರು : ಮಂತ್ರಿ ಸ್ಥಾನ ಸಿಗದೆ ಹತಾಶರಾಗಿರುವ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಮ್ಮೆ ಕಿಡಿಕಾರಿದ್ದಾರೆ.
ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ, ಎದೆ ಕೊಟ್ಟು ನಿಲ್ಲುತ್ತೇನೆ. ನಾನು ಮಂತ್ರಿ ಆಗೋದು ಬಿಡೋದು ಬೇರೆ ಪ್ರಶ್ನೆ. ಐವರನ್ನು ಸಿಎಂ ಆಯ್ಕೆ ಮಾಡುವುದರಲ್ಲಿ ನಾನು ಪಾತ್ರವಹಿಸಿದ್ದೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೊಟೇಲ್​ನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಬಿ.ಕೆ.ಹರಿಪ್ರಸಾದ್ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ರಾಜಕೀಯವಾಗಿ ಈಡಿಗ ಸಮುದಾಯದವರು ಮುಂದೆ ಬರುತ್ತಿಲ್ಲ. ಏನೇ ಪ್ರಯತ್ನ ಮಾಡಿದ್ರು ಆಗುತ್ತಿಲ್ಲ. ಅವಕಾಶ ವಂಚಿತರಾಗುತ್ತಿರುವುದು ನೋಡಿದರೆ ಯಾರದ್ದೊ ಷಡ್ಯಂತ್ರಕ್ಕೆ ಬಲಿಯಾಗುತ್ತಿದ್ದೇವೆ ಅನಿಸುತ್ತದೆ. ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಕ್ಕೆ ಸೇರಿದವರು. ಹಿಂದುಳಿದವರೆಲ್ಲ ಒಟ್ಟಿಗೆ ಸೇರಬೇಕು ಎಂದು ನಾವು 2013ರಲ್ಲಿ ಬೆಂಬಲ ಕೊಟ್ಟಿದ್ದೆವು. ಬೆಂಬಲ ಕೊಟ್ಟ ಬಳಿಕ ನಾವು ಕಾಂಗ್ರೆಸ್ ಬಳಿ ಕೈ ಚಾಚುವುದಿಲ್ಲ ಎಂದಿದ್ದಾರೆ.
ಕಾರ್ಕಳ ಕೋಟಿ-ಚೆನ್ನಯ ಪಾರ್ಕ್‌ಗೆ 5 ಕೋಟಿ ಕೊಡಿ ಎಂದು ಕೇಳಿದ್ದೆವು. ಸಿದ್ದರಾಮಯ್ಯ ಕೊಡುತ್ತೇನೆ ಎಂದು ಹೇಳಿ ಕೊಟ್ಟಿಲ್ಲ. ಮಂಗಳೂರು ವಿವಿಯಲ್ಲಿ ಗುರುಪೀಠ ಸ್ಥಾಪನೆಗೆ ನಾನು ಎಂಪಿ ಆದಾಗ ಹಣ ಕೊಟ್ಟಿದೆ. ಕಟ್ಟಡ ಅರ್ಧಕ್ಕೆ ನಿಂತಿದೆ ಹಣ ಕೊಟ್ಟಿಲ್ಲ, ಆದರೆ ಅವರ ಸಮಾಜಕ್ಕೆ ಎಷ್ಟು ಕೊಟ್ಟಿದ್ದಾರೆ ಎಂದು ಸ್ವಾಮೀಜಿಗಳು ನೋಡಲಿ. 11 ಕ್ಷೇತ್ರಗಳಲ್ಲಿ ಈಡಿಗ, ಬಿಲ್ಲವ, ದೀವರು ನಿರ್ಣಯಕವಾಗಿದ್ದೇವೆ. ನಾನು ಸಹ ಎಲೆಕ್ಷನ್ ಕಮಿಟಿಯಲ್ಲಿ ಇದ್ದೆ, ನಾಲ್ಕು ಜನ ಟಿಕೆಟ್ ವಂಚಿತರಾದರು. 2 ಬಿಲ್ಲವ, 1 ಈಡಿಗ, 1 ದೀವರು ವಂಚಿತರಾದರು. ಮಂಗಳೂರು ಉತ್ತರ ಮತ್ತು ದಕ್ಷಿಣದಲ್ಲಿ ಅಲ್ಪಸಂಖ್ಯಾತರಿಗೆ ಕೊಟ್ಟಿದ್ದಾರೆ. ನಾವು ಅಲ್ಪಸಂಖ್ಯಾತರ ವಿರೋಧಿಗಳಲ್ಲ. ನೀವು ಮುಂದೆ ಬರಬೇಕಾದರೆ ಅಲ್ಪಸಂಖ್ಯಾತರ ವಿರುದ್ಧ ಧ್ವನಿ ಎತ್ತಬಾರದು. ಅಲ್ಪಸಂಖ್ಯಾತರನ್ನು‌ ಮುಂದಿಟ್ಟು ನಮಗೆ ಟಿಕೆಟ್ ವಂಚಿತರನ್ನಾಗಿ ಮಾಡುತ್ತಾರೆ ಎಂದಿದ್ದಾರೆ.



















































































error: Content is protected !!
Scroll to Top