ನಕಲಿ ಪತ್ರ ಎಂದು ಸರಕಾರದ ಸಮರ್ಥನೆ
ಬೆಂಗಳೂರು : ಮಂಡ್ಯದ 7 ಸಹಾಯಕ ಕೃಷಿ ನಿರ್ದೇಶಕರು ಕೃಷಿ ಸಚಿವ ಚಲುವರಾಯಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವ ಪತ್ರ ವೈರಲ್ ಆಗಿ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಪತ್ರವನ್ನು ಹಿಡಿದುಕೊಂಡು ವಿರೋಧ ಪಕ್ಷ ಬಿಜೆಪಿ, ಸರ್ಕಾರದ ಮೇಲೆ ಮುಗಿಬಿದ್ದಿದೆ. ಆದರೆ ಇದನ್ನು ಆಡಳಿತರೂಢ ಕಾಂಗ್ರೆಸ್ ನಾಯಕರು ನಕಲಿ ಪತ್ರ ಎಂದು ಅಲ್ಲಗಳೆದಿದ್ದಾರೆ. ಈ ನಡುವೆ ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ವಿ.ಎಸ್.ಅಶೋಕ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು, ಈ ಕುರಿತು ತನಿಖೆ ಮಾಡುವಂತೆ ಮನವಿ ಮಾಡಿದ್ದಾರೆ.
13-04-22ರಿಂದ ಮಂಡ್ಯ ಜಿಲ್ಲೆಯ ಕೃಷಿ ಇಲಾಖೆಯಲ್ಲಿ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಕೃಷಿ ಸಚಿವರು ಸಹಾಯಕ ಕೃಷಿ ನಿರ್ದೇಶಕರಿಂದ ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ದೂರಲಾಗಿದೆ. ಪತ್ರವನ್ನು ರಾಜ್ಯಪಾಲರು ಅಂಗೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಷರಾ ಬರೆದು ರಾಜ್ಯ ಮುಖ್ಯ ಕಾರ್ಯದರ್ಶಿಯವರಿಗೆ ರವಾನಿಸಿದ್ದಾರೆ.
ದೂರು ಅರ್ಜಿಯ ವಿಚಾರವಾಗಿ ಸಹಾಯಕ ಕೃಷಿ ನಿರ್ದೇಶಕರನ್ನ ವಿಚಾರ ಮಾಡಿದ್ದೇನೆ. ದೂರು ಅರ್ಜಿಯನ್ನ ರಾಜ್ಯಪಾಲರಿಗೆ ನೀಡಿಲ್ಲ. ನಮ್ಮ ಸಿಬ್ಬಂದಿಗೂ ತಿಳಿದಿಲ್ಲ. ಕೃಷಿ ಸಚಿವರು ಹಣಕ್ಕೆ ಬೇಡಿಕೆ ಇಟ್ಟಿಲ್ಲ. ಯಾವುದೇ ಕಿರುಕುಳ ನೀಡಿಲ್ಲವೆಂದು ತಿಳಿಸಿರುತ್ತಾರೆ. ದೂರು ಅರ್ಜಿಯ ಸಹಿಗಳು ನಮ್ಮದಲ್ಲ ಎಂದು ಹೇಳಿದ್ದಾರೆ. ದುರುದ್ದೇಶದಿಂದ ರಾಜ್ಯಪಾಲರಿಗೆ ದೂರು ನೀಡಿರುತ್ತಾರೆ. ಈ ರೀತಿ ಅಪಪ್ರಚಾರ ಮಾಡಿ ಇಲಾಖೆಗೆ ಕೆಟ್ಟ ಹೆಸರು ತರುತ್ತಿರುವ ವ್ಯಕ್ತಿಗಳನ್ನು ಪತ್ತೆ ಮಾಡಿ ಕ್ರಮ ತೆಗೆದುಕೊಳ್ಳುವಂತೆ ಮಂಡ್ಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ದೂರು ನೀಡಿದ್ದಾರೆ.
ರಾಜ್ಯಪಾಲರಿಗೆ ಪತ್ರ ಬರೆದಿರುವ ವಿಚಾರವಾಗಿ ಈ ಬಗ್ಗೆ ಸೂಕ್ತ ತನಿಖೆ ಮಾಡುವಂತೆ ಮಂಡ್ಯ ಜಿಲ್ಲೆಯ ಕಾಂಗ್ರೆಸ್ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರು ಎಸ್‌ಪಿಗೆ ದೂರು ನೀಡಿದ್ದಾರೆ. ಕೃಷಿ ಸಚಿವರ ವಿರುದ್ಧ ಏಳು ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಕಲಿ ಸಹಿ ಬಳಸಿದ್ದಾರೆ. ಇದು ವ್ಯವಸ್ಥಿತ ಷಡ್ಯಂತ್ರವಾಗಿದೆ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ. ಅಧಿಕಾರಿಗಳ ಹೆಸರಿನಲ್ಲಿ ದೂರುಗಳನ್ನು ಸೃಷ್ಟಿಸಿ ಬ್ಲಾಕ್‌ಮೇಲ್ ತಂತ್ರ ಮಾಡಿ ಜನಪ್ರತಿನಿಧಿಗಳನ್ನ ಬೆದರಿಸುವ ಹುನ್ನಾರವಾಗಿದೆ. ಇದರ ಹಿಂದೆ ದೊಡ್ಡ ಜಾಲವೇ ಅಡಗಿದೆ. ನಕಲಿ ಪತ್ರದ ಸೂತ್ರಧಾರನನ್ನು ಪತ್ತೆ ಹಚ್ಚಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.






































































