‘ಅಪ್ಪಯ್ಯ ಮತ್ತು ಅತೀಂದ್ರನ ಅಟಾಟೋಪ’ ಕಂಡು ಹೌಹಾರಿದವರು ಯಾರು? : ಸಿದ್ದರಾಮಯ್ಯಗೆ ಕುಮಾರಸ್ವಾಮಿ ಟಾಂಗ್‌

ಸರಕಾರದ ನಿದ್ದೆಗೆಡಿಸಿದ ಕಮಿಷನ್‌ ಆರೋಪದ ಪತ್ರ

ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಕಮಿಷನ್‌ ವಹಿವಾಟು ಕುರಿತುಅಧಿಕಾರಿಗಳು ಬರೆದ ಪತ್ರ ಸರಕಾರವನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಮಾಡಿಕೊಂಡು ಮಾಜಿ ಮುಖ್ಯಮಂತ್ರಿ ಸರಣಿ ಟ್ವೀಟ್‌ಗಳನ್ನು ಮಾಡಿ ಕಾಲೆಳೆದಿದ್ದಾರೆ. ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.
ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ.
ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿ ಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್‌ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಅಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.















































































































































error: Content is protected !!
Scroll to Top