ಉದಯ್ ನಿಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬಿಜೆಪಿ ಯುವಮೋರ್ಚಾ ಆಗ್ರಹ

ಕಾರ್ಕಳ : ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸರಕಾರದ ಸಚಿವ, ಡಿಎಂಕೆ ಶಾಸಕ ಉದಯನಿಧಿ ಸ್ಟಾಲಿನ್ ನೀಡಿರುವ ಹೇಳಿಕೆ ಹಿಂದೂ ಧರ್ಮದ ಅನುಯಾಯಿಗಳನ್ನು ನಾಶ ಮಾಡುವ ಮತ್ತು ಅದಕ್ಕೆ ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ಆದ್ದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸೆ. 4 ರಂದು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಮನವಿ ಸಲ್ಲಿಸಿದೆ.

ಸೆ. 2 ರಂದು ಉದಯನಿಧಿ ಸ್ಟಾಲಿನ್ ಚೈನ್ನೈನ ಕಾರ್ಯಕ್ರಮವೊಂದರಲ್ಲಿ ತಮ್ಮ ಭಾಷಣದಲ್ಲಿ ಮಾತನಾಡುತ್ತಾ, ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು. ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅವುಗಳನ್ನು ನಿರ್ಮೂಲನೆ ಮಾಡಬೇಕು. ಸೊಳ್ಳೆಗಳು, ಡೆಂಗ್ಯೂ ಜ್ವರ, ಮಲೇರಿಯಾ ಮತ್ತು ಕೊರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಅವುಗಳನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಇಂತಹ ಹೇಳಿಕೆ ನೀಡುವ ಮೂಲಕ ಉದಯನಿಧಿ ಸ್ಟಾಲಿನ್ ಅವರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು 153 ಬಿ, 295 ಎ, 298 ಮತ್ತು 505 ರ ಅಡಿಯಲ್ಲಿ ಅಪರಾಧವನ್ನು ಎಸಗಿದ್ದಾರೆ, ಇದು ಗುರುತಿಸಬಹುದಾದ ಮತ್ತು ಗಂಭೀರ ಸ್ವರೂಪದ ಅಪರಾಧವಾಗಿದೆ. ಆದ್ದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ. ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ವಿಖ್ಯಾತ್‌ ಶೆಟ್ಟಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

error: Content is protected !!
Scroll to Top